ಕುಕ್ಕರ್ ಬಾಂಬ್ : ಆರೋಪಿ ಮೊಹಮ್ಮದ್ ಶಾರಿಕ್‌ಗೆ 10 ವರ್ಷಗಳ ಜೈಲು ಶಿಕ್ಷೆ ; ಎನ್‌ಐಎ ವಿಶೇಷ ನ್ಯಾಯಾಲಯ ಮಹತ್ವ ತೀರ್ಪು

Picture of RB NEWS

RB NEWS

Bureau Report

ಬೆಂಗಳೂರು, ಏಪ್ರಿಲ್ 27: 2022ರ ನವೆಂಬರ್ 19ರಂದು ಮಂಗಳೂರಿನ ಕಂಕನಾಡಿ ಪ್ರದೇಶದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್‌ಗೆ 10 ವರ್ಷಗಳ ಜೈಲು ಶಿಕ್ಷೆಯನ್ನು ಎನ್‌ಐಎ ವಿಶೇಷ ನ್ಯಾಯಾಲಯ ವಿಧಿಸಿದೆ.
ಈ ಪ್ರಕರಣವು ದೇಶದ ಭದ್ರತೆಗೆ ಗಂಭೀರ ಧಕ್ಕೆಯನ್ನು ಉಂಟುಮಾಡುವ ಉದ್ದೇಶದಿಂದ ರೂಪಿಸಲಾಗಿದ್ದ ಸಂಚುವಾಗಿದ್ದು, ಆರೋಪಿಯ ವಿರುದ್ಧದ ಸಾಕ್ಷ್ಯಾಧಾರಗಳನ್ನು ಪರಿಗಣಿಸಿ ನ್ಯಾಯಾಲಯ ತೀರ್ಪು ನೀಡಿದೆ. ಶಾರಿಕ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 121ಎ (ಭಾರತ ಸರ್ಕಾರದ ವಿರುದ್ಧ ಯುದ್ಧ ಸಾರುವ ಸಂಚು), 122 (ಯುದ್ಧಕ್ಕೆ ಶಸ್ತ್ರಾಸ್ತ್ರ ಸಂಗ್ರಹಣೆ), 326 (ಮಾರಕ ಆಯುಧಗಳಿಂದ ಗಂಭೀರ ಗಾಯಗೊಳಿಸುವುದು) ಸೇರಿದಂತೆ ಅನೇಕ ಕಾನೂನುಗಳಡಿ, ಜೊತೆಗೆ ಯುಎಪಿಎ ಕಾಯ್ದೆಯಡಿ ಶಿಕ್ಷೆ ವಿಧಿಸಲಾಗಿದೆ.
ಘಟನೆಯ ವಿವರಗಳ ಪ್ರಕಾರ, ಮಂಗಳೂರಿನ ಕಂಕನಾಡಿ ರೈಲು ನಿಲ್ದಾಣದ ಸಮೀಪದ ನಾಗುರಿ ಪ್ರದೇಶದಲ್ಲಿ ಸಂಚರಿಸುತ್ತಿದ್ದ ಆಟೋ ರಿಕ್ಷಾದಲ್ಲಿ ಪ್ರೆಶರ್ ಕುಕ್ಕರ್‌ನೊಳಗೆ ಅಳವಡಿಸಲಾಗಿದ್ದ ಐಇಡಿ ಬಾಂಬ್ ಆಕಸ್ಮಿಕವಾಗಿ ಸ್ಫೋಟಗೊಂಡಿತ್ತು. ಈ ಸ್ಫೋಟದಲ್ಲಿ ಆರೋಪಿ ಶಾರಿಕ್ ಹಾಗೂ ಆಟೋ ಚಾಲಕ ಪುರುಷೋತ್ತಮ ಪೂಜಾರಿ ಗಂಭೀರವಾಗಿ ಗಾಯಗೊಂಡಿದ್ದರು.
ತನಿಖೆಯ ವೇಳೆ, ಸ್ಫೋಟಕ ವಸ್ತುಗಳಲ್ಲಿ ಡಿಟೋನೇಟರ್, ಸರ್ಕ್ಯೂಟ್ ಹಾಗೂ ಬ್ಯಾಟರಿಗಳನ್ನು ಬಳಸಿರುವುದು ಪತ್ತೆಯಾಯಿತು. ಶಾರಿಕ್ ನಕಲಿ ಆಧಾರ್ ಕಾರ್ಡ್ ಬಳಸಿಕೊಂಡಿದ್ದು, ಮೈಸೂರಿನಲ್ಲಿ ಬಾಡಿಗೆ ಮನೆಯಲ್ಲಿ ಬಾಂಬ್ ತಯಾರಿಕೆಗೆ ಬೇಕಾದ ಸಾಮಗ್ರಿಗಳನ್ನು ಸಂಗ್ರಹಿಸಿದ್ದಾನೆ ಎಂಬುದು ಬೆಳಕಿಗೆ ಬಂದಿದೆ.
ಪ್ರಕರಣದ ಗಂಭೀರತೆಯನ್ನು ಮನಗಂಡು ಕೇಂದ್ರ ಸರ್ಕಾರ ಇದನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿತ್ತು. ತನಿಖೆಯಲ್ಲಿ, ಶಾರಿಕ್ ಐಸಿಸ್ ಉಗ್ರ ಸಂಘಟನೆಯಿಂದ ಪ್ರೇರಿತನಾಗಿದ್ದು, ಜನನಿಬಿಡ ಪ್ರದೇಶಗಳು ಹಾಗೂ ಧಾರ್ಮಿಕ ಸ್ಥಳಗಳನ್ನು ಗುರಿಯಾಗಿಸಿಕೊಂಡು ವಿಧ್ವಂಸಕ ಕೃತ್ಯಗಳನ್ನು ರೂಪಿಸಿದ್ದಾನೆ ಎಂಬುದು ಬಹಿರಂಗವಾಗಿದೆ.
ಕಳೆದ ನಾಲ್ಕು ವರ್ಷಗಳಿಂದ ನಡೆದ ಸುದೀರ್ಘ ವಿಚಾರಣೆಯ ನಂತರ, ಎನ್‌ಐಎ ವಿಶೇಷ ನ್ಯಾಯಾಲಯ ಇಂದು ಅಂತಿಮ ತೀರ್ಪು ಪ್ರಕಟಿಸಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top