ಬೆಳ್ತಂಗಡಿ, ಆ. 21: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ವೇಣೂರು ಪೊಲೀಸರು ಪೋಕ್ಸೋ ಕಾಯ್ದೆಯಡಿ ಆಟೋ ಚಾಲಕನೊಬ್ಬನನ್ನು ಬಂಧಿಸಿದ್ದಾರೆ. ಬಂಧಿತನನ್ನು ವೇಣೂರು ನಿವಾಸಿ ಜಮಾಲುದ್ದೀನ್ ಎಂದು ಗುರುತಿಸಲಾಗಿದೆ. ಪೊಲೀಸರಿಗೆ ನೀಡಿರುವ ದೂರಿನ ಪ್ರಕಾರ, 14 ವರ್ಷದ ಬಾಲಕಿ ಕೆಲವು ತಿಂಗಳುಗಳಿಂದ ಆರೋಪಿಯ ಆಟೋದಲ್ಲಿ ಶಾಲೆಗೆ ತೆರಳಿ ಬರುತ್ತಿದ್ದಳು. ಈ ಸಂದರ್ಭದಲ್ಲಿ ಆರೋಪಿ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದ ಎನ್ನಲಾಗಿದ್ದು, ಬಾಲಕಿ ಇದಕ್ಕೆ ವಿರೋಧ ವ್ಯಕ್ತಪಡಿಸಿದಾಗ ಜೀವ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬೆದರಿಕೆಯಿಂದಾಗಿ ಬಾಲಕಿ ಈ ವಿಚಾರವನ್ನು ಯಾರಿಗೂ ತಿಳಿಸಿರಲಿಲ್ಲ ಎನ್ನಲಾಗಿದೆ. ಆ. 13ರಂದು ಸಂಜೆ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದ ಸಂದರ್ಭದಲ್ಲಿ ಆರೋಪಿ ಮನೆಗೆ ಬಂದು ಬೆದರಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿ ವೇಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಈ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 56/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 75(2), 64(1), 65(1), 351(3) ಹಾಗೂ ಪೋಕ್ಸೋ ಕಾಯ್ದೆ 2012ರ ಕಲಂ 4(2), 8 ಮತ್ತು 12ರ ಅಡಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಆ. 15ರಂದು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.