ಮಂಗಳೂರು ವಿವಿ ಕಾಲೇಜು ವಿದ್ಯಾರ್ಥಿ ಸಂಘ ಚುನಾವಣೆ: ಎಬಿವಿಪಿ ಬೆಂಬಲಿತ ಅಭ್ಯರ್ಥಿಗಳಿಗೆ ಭರ್ಜರಿ ಗೆಲುವು
RB NEWS
Bureau Report
ಮಂಗಳೂರು ವಿವಿ ಕಾಲೇಜು ವಿದ್ಯಾರ್ಥಿ ಸಂಘ ಚುನಾವಣೆ: ಎಬಿವಿಪಿ ಬೆಂಬಲಿತ ಅಭ್ಯರ್ಥಿಗಳಿಗೆ ಭರ್ಜರಿ ಗೆಲುವು
ಮಂಗಳೂರು: ನಗರದ ಹಂಪನಕಟ್ಟೆಯಲ್ಲಿರುವ ಐತಿಹಾಸಿಕ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. ಚುನಾವಣೆಗೂ ಮುನ್ನ ವಿದ್ಯಾರ್ಥಿ ಸಂಘದ ಮತದಾನ ವ್ಯವಸ್ಥೆಯಲ್ಲಿ ಬದಲಾವಣೆ ತರುವ ಕುರಿತು ಸರ್ಕಾರದ ಮಟ್ಟದಲ್ಲಿ ಆದೇಶ ಹೊರಡಿಸಲಾಗಿತ್ತು. ಇದುವರೆಗೆ ತರಗತಿ ಪ್ರತಿನಿಧಿಗಳ ಮೂಲಕ ನಡೆಯುತ್ತಿದ್ದ ಪರೋಕ್ಷ ಮತದಾನದ ಬದಲು, ಎಲ್ಲ ವಿದ್ಯಾರ್ಥಿಗಳು ನೇರವಾಗಿ ಮತ ಚಲಾಯಿಸುವ ನೇರ ಚುನಾವಣಾ ಪದ್ಧತಿ ಜಾರಿಗೆ ತರಲು ಸರ್ಕಾರ ಸೂಚಿಸಿತ್ತು. ಆದರೆ, ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಈಗಾಗಲೇ ಚುನಾವಣಾ ಪ್ರಕ್ರಿಯೆ ಆರಂಭವಾಗಿದ್ದು, ಸೆ.10ರಂದು ಸರ್ಕಾರದ ಹೊಸ ಆದೇಶ ಹೊರಬರುವುದಕ್ಕೂ ಮುನ್ನವೇ ಚುನಾವಣಾ ವೇಳಾಪಟ್ಟಿ ಪ್ರಕಟಿಸಲಾಗಿತ್ತು. ಚುನಾವಣಾ ಪ್ರಕ್ರಿಯೆ ಆರಂಭವಾದ ಬಳಿಕ ಮಧ್ಯದಲ್ಲಿ ಜಾರಿಯಾಗುವ ಹೊಸ ನಿಯಮಗಳನ್ನು ಅನ್ವಯಿಸಲು ಸಾಧ್ಯವಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿ ನಾಯಕರು ವಾದಿಸಿದ್ದರು. ಸರ್ಕಾರದ ಕಡೆಯಿಂದ ಒತ್ತಡ ಬಂದರೂ ಕಾಲೇಜು ಆಡಳಿತ ಮಂಡಳಿ ನಿಗದಿತ ವೇಳಾಪಟ್ಟಿಯಂತೆ ಪರೋಕ್ಷ ಮತದಾನ ಪ್ರಕ್ರಿಯೆಯನ್ನು ಮುಂದುವರಿಸಿ ಯಶಸ್ವಿಯಾಗಿ ಚುನಾವಣೆ ನಡೆಸಿದೆ. ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಹಂಪನಕಟ್ಟೆಯ ಕಾಲೇಜು ಆವರಣದಲ್ಲಿ ಎಬಿವಿಪಿ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ವಿಜಯೋತ್ಸವ ಆಚರಿಸಿದರು. ಕೇಸರಿ ಧ್ವಜ ಹಿಡಿದು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಅವರು, ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ರಾಜಕೀಯ ಹಸ್ತಕ್ಷೇಪಕ್ಕೆ ಅವಕಾಶ ನೀಡುವುದಿಲ್ಲ ಎಂಬ ಸಂದೇಶವನ್ನು ನೀಡಿದರು. ಸರ್ಕಾರ ತರಾತುರಿಯಲ್ಲಿ ಆದೇಶ ಹೊರಡಿಸಿ ಕಾಲೇಜು ಚುನಾವಣೆಯಲ್ಲಿ ರಾಜಕೀಯ ಮಾಡಲು ಮುಂದಾಗಿದ್ದರೂ, ವಿದ್ಯಾರ್ಥಿಗಳು ಅದಕ್ಕೆ ತಕ್ಕ ಉತ್ತರ ನೀಡಿದ್ದಾರೆ ಎಂದು ಎಬಿವಿಪಿ ನಾಯಕರು ಪ್ರತಿಕ್ರಿಯಿಸಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಚುನಾವಣೆ ರಾಜ್ಯಮಟ್ಟದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ವಿದ್ಯಾರ್ಥಿ ಸಮುದಾಯದಿಂದ ಎದುರಾಗಿರುವ ತೀವ್ರ ಪ್ರತಿರೋಧದ ಸಂಕೇತವಾಗಿದೆ ಎಂದು ಅವರು ಹೇಳಿದ್ದಾರೆ. 37 ಸ್ಥಾನಗಳಲ್ಲೂ ಎಬಿವಿಪಿ ಬೆಂಬಲಿತ ಅಭ್ಯರ್ಥಿಗಳ ಗೆಲುವು ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಎಬಿವಿಪಿ ಬೆಂಬಲಿತ ಅಭ್ಯರ್ಥಿಗಳು ಎಲ್ಲ 37 ಸ್ಥಾನಗಳಲ್ಲೂ ಗೆಲುವು ಸಾಧಿಸಿದ್ದಾರೆ. ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಶ್ರೇಯನ್, ಕಾರ್ಯದರ್ಶಿಯಾಗಿ ಅಕ್ಷಯ್, ಸಹ ಕಾರ್ಯದರ್ಶಿಯಾಗಿ ರಂಜಿತಾ, ಲಲಿತಕಲಾ ಸಂಘದ ಕಾರ್ಯದರ್ಶಿಯಾಗಿ ಚರಣ್ ಹಾಗೂ ಸಹ ಕಾರ್ಯದರ್ಶಿಯಾಗಿ ಶ್ರಾವ್ಯ ಶೆಟ್ಟಿ ಆಯ್ಕೆಯಾಗಿದ್ದಾರೆ. ಈ ಮೂಲಕ ಕಾಲೇಜಿನ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಎಬಿವಿಪಿ ಬೆಂಬಲಿತ ಅಭ್ಯರ್ಥಿಗಳು ಸಂಪೂರ್ಣ ಮೇಲುಗೈ ಸಾಧಿಸಿದ್ದಾರೆ.