ಶಾಸಕ ಸುನಿಲ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪೋಸ್ಟರ್ ಅಭಿಯಾನಕ್ಕೆ ಪೊಲೀಸರ ತಡೆ

Picture of RB NEWS

RB NEWS

Bureau Report


ಕಾರ್ಕಳ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ರಾಜ್ಯ ಸಚಿವರಾಗಿದ್ದ ನಾಗೇಂದ್ರ ಅವರ ರಾಜೀನಾಮೆ ವಿಚಾರವನ್ನು ಮುಂದಿಟ್ಟುಕೊಂಡು, ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪೋಸ್ಟರ್ ಅಭಿಯಾನಕ್ಕೆ ಪೊಲೀಸರು ತಡೆ ನೀಡಿದ್ದಾರೆ. ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.
ನೀಟ್ ಪರೀಕ್ಷೆಯಲ್ಲಿನ ಅಕ್ರಮ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ವಾಲ್ಮೀಕಿ ನಿಗಮದ ಹಗರಣದ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಸಚಿವರಾಗಿದ್ದ ನಾಗೇಂದ್ರ ರಾಜೀನಾಮೆ ನೀಡಿರುವುದನ್ನು ಕಾಂಗ್ರೆಸ್ ಮುಖಂಡರು ಉಲ್ಲೇಖಿಸಿದರು. ಇದೇ ಮಾದರಿಯಲ್ಲಿ ನಕಲಿ ಪರಶುರಾಮನ ಮೂರ್ತಿ ನಿರ್ಮಾಣ ಹಾಗೂ ಭ್ರಷ್ಟಾಚಾರದ ಆರೋಪಗಳಿಗೆ ಸಂಬಂಧಿಸಿ ಶಾಸಕ ವಿ. ಸುನಿಲ್ ಕುಮಾರ್ ಕೂಡ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
ಇಂದು ಬೆಳಗ್ಗೆ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರು ಜಮಾಯಿಸಿ, ಶಾಸಕರ ಮನೆಗೆ ಪೋಸ್ಟರ್ ಅಂಟಿಸಲು ತೆರಳುತ್ತಿದ್ದರು. ಈ ವೇಳೆ ಸರ್ವಜ್ಞ ವೃತ್ತದ ಬಳಿ ಪೊಲೀಸರು ಪ್ರತಿಭಟನಾಕಾರರನ್ನು ತಡೆದು ವಶಕ್ಕೆ ಪಡೆದರು.
ಪೊಲೀಸರ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಕಾರ್ಯಕರ್ತರು, ‘ಸುನಿಲ್ ಕುಮಾರ್ ರಾಜೀನಾಮೆ ನೀಡಲೇಬೇಕು’ ಎಂದು ಘೋಷಣೆ ಕೂಗಿ ರಸ್ತೆಯಲ್ಲೇ ಪ್ರತಿಭಟನೆ ನಡೆಸಿದರು. ಪೋಸ್ಟರ್ ಅಭಿಯಾನವನ್ನು ಇಂದು ಅಥವಾ ನಾಳೆಗೆ ಮಾತ್ರ ಸೀಮಿತಗೊಳಿಸದೆ, ಮುಂದಿನ ದಿನಗಳಲ್ಲಿಯೂ ಮುಂದುವರಿಸಿ ಶಾಸಕರ ಮನೆಗೆ ಪೋಸ್ಟರ್ ಅಂಟಿಸುವುದಾಗಿ ಪ್ರತಿಭಟನಾಕಾರರು ತಿಳಿಸಿದ್ದಾರೆ.


ಬಿಗಿ ಪೊಲೀಸ್ ಬಂದೋಬಸ್ತ್
ಪೋಸ್ಟರ್ ಅಭಿಯಾನಕ್ಕೆ ತಡೆ ನೀಡುವ ಹಿನ್ನೆಲೆಯಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪ್ರಮುಖ ಸ್ಥಳಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್, ಯುವ ಕಾಂಗ್ರೆಸ್ ಅಧ್ಯಕ್ಷ ಸೂರಾಜ್ ಶೆಟ್ಟಿ ನಕ್ರೆ, ಸುಧಾಕರ ಶೆಟ್ಟಿ ಮುಡಾರು, ಪುರಸಭೆ ಮಾಜಿ ಅಧ್ಯಕ್ಷ ಸುಭಿತ್ ಎನ್.ಆರ್., ಮಾಜಿ ಸದಸ್ಯ ವಿವೇಕಾನಂದ ಶೆಣೈ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top