ಉಡುಪಿಯಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ: ತ್ವರಿತ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ
ಬೆಳಗಾವಿ : ಉಡುಪಿಯಲ್ಲಿ 5 ವರ್ಷದ ಬಾಲಕಿಗೆ ಅಪರಿಚಿತ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಕುರಿತು ತ್ವರಿತ ಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದ್ದಾರೆ.

ಅಪಘಾತದಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಘಟನೆಯ ಮಾಹಿತಿ ಬಂದ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಘಟನೆಯ ವಿವರ ಪಡೆದರು.
ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಆರೋಪಿಯನ್ನು ತಕ್ಷಣ ಪತ್ತೆ ಹಚ್ಚಬೇಕು. ಜೊತೆಗೆ, ಬಾಲಕಿಗೆ ಅಗತ್ಯವಾದ ಎಲ್ಲ ನೆರವನ್ನು ನೀಡಬೇಕು ಎಂದು ಸಚಿವರು ಜಿಲ್ಲಾಧಿಕಾರಿ ಹಾಗೂ ಎಸ್ಪಿಗೆ ಸೂಚನೆ ನೀಡಿದ್ದಾರೆ.
ಘಟನೆಯ ವಿವರ…..
ಉಡುಪಿ :ಐದು ವರ್ಷದ ಬಾಲಕಿಗೆ ಭಿಕ್ಷುಕನೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ಉಡುಪಿ ನಗರದ ಪಿಪಿಸಿ ಸಮೀಪದ ಓಣಿಯಲ್ಲಿ ಗುರುವಾರ ಮಧ್ಯಾಹ್ನ ವೇಳೆ ನಡೆದಿದ್ದು, ಸ್ಥಳೀಯ ಸಿಸಿಟಿವಿಯಲ್ಲಿ ದೃಶ್ಯಾವಳಿ ಸೆರೆಯಾಗಿದೆ.
ಸುಮಾರು 30 ವರ್ಷದ ವ್ಯಕ್ತಿ ಈ ಕೃತ್ಯ ಎಸಗಿದ್ದಾನೆ. ಆತ ಮಗುವಿಗೆ ಚಾಕಲೇಟ್ಗಳ ಆಮಿಷ ಒಡ್ಡಿ, ಹತ್ತಿರದ ಫುಟ್ಪಾತ್ಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡುತ್ತಿದ್ದನು ಎನ್ನಲಾಗಿದೆ.
ಘಟನೆ ನಡೆದಾಗ ಬಾಲಕಿ ತನ್ನ ಪೋಷಕರ ಅಂಗಡಿಯ ಹೊರಗೆ ಮತ್ತೊಂದು ಮಗುವಿನೊಂದಿಗೆ ಆಟವಾಡುತ್ತಿದ್ದಳು. ಆಕೆಯ ಸ್ನೇಹಿತ ಹಿಂತಿರುಗಿ ಆಕೆಯನ್ನು ಹುಡುಕಿದಾಗ ವಿಷಯ ಬೆಳಕಿಗೆ ಬಂದಿದೆ. ನಂತರ ಮಗು ಘಟನೆಯ ಬಗ್ಗೆ ಪೋಷಕರಿಗೆ ತಿಳಿಸಿದ್ದು, ಈ ಬಗ್ಗೆ ಬಾಲಕಿಯ ಪೋಷಕರು ನೀಡಿದ ದೂರಿನಂತೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಯು ತಲೆಮರೆಸಿಕೊಂಡಿದ್ದು, ಆತನನ್ನು ಬಂಧಿಸುವ ಪ್ರಯತ್ನ ಮುಂದುವರಿದಿದೆ.






































