ಉಡುಪಿ: ಯುವತಿಯ ಮಾನಭಂಗಕ್ಕೆ ಯತ್ನಿಸಿದ ಆರೋಪ; ಹಲ್ಲೆಗೊಳಗಾಗಿ ಆಸ್ಪತ್ರೆ ಸೇರಿದ್ದ ಯುವಕ ಆತ್ಮಹತ್ಯೆ

Picture of RB NEWS

RB NEWS

Bureau Report


ಉಡುಪಿ: ಯುವತಿಯ ಮಾನಭಂಗಕ್ಕೆ ಯತ್ನಿಸಿದ ಆರೋಪ; ಹಲ್ಲೆಗೊಳಗಾಗಿ ಆಸ್ಪತ್ರೆ ಸೇರಿದ್ದ ಯುವಕ ಆತ್ಮಹತ್ಯೆ


ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲಿ ದುರಂತ ಅಂತ್ಯ – ಇಬ್ಬರು ಪೊಲೀಸರ ಕಣ್ಗಾವಲಿದ್ದರೂ ಘಟನೆ; ದೂರು ಸ್ವೀಕಾರದ ವಿಚಾರವಾಗಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಸಮಾಧಾನ


ಉಡುಪಿ: ಯುವತಿಯೊಬ್ಬಳ ಮಾನಭಂಗಕ್ಕೆ ಯತ್ನಿಸಿದ ಆರೋಪದ ಮೇಲೆ ಹಲ್ಲೆಗೊಳಗಾಗಿ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 28 ವರ್ಷದ ಯುವಕನೊಬ್ಬ ಆಸ್ಪತ್ರೆಯ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಸಂಜೆ ನಡೆದಿದೆ.
ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಪಾಡಿಗಾರ ನಿವಾಸಿ ಪ್ರದೀಪ್ ಪೂಜಾರಿ (28) ಮೃತಪಟ್ಟ ಯುವಕ.
ಪ್ರದೀಪ್ ಕಳೆದ ಏಳು ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಅ.27ರಂದು ಯುವತಿಯ ಮನೆಗೆ ತೆರಳಿದ ಆತ ಗಲಾಟೆ ನಡೆಸಿದ್ದಲ್ಲದೆ, ಯುವತಿ ಹಾಗೂ ಆಕೆಯ ತಾಯಿಯ ಮೇಲೆ ಮೆಣಸಿನ ಪುಡಿ ಎರಚಿ ಹಲ್ಲೆಗೆ ಯತ್ನಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಸಂದರ್ಭದಲ್ಲಿ ಮನೆಯವರ ಕೂಗಾಟ ಕೇಳಿ ಸ್ಥಳಕ್ಕೆ ಧಾವಿಸಿದ ನೆರೆಹೊರೆಯವರು ಪ್ರದೀಪ್‌ಗೆ ಹಲ್ಲೆ ನಡೆಸಿದ್ದರು ಎನ್ನಲಾಗಿದೆ.
ತನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಪ್ರದೀಪ್ ಹಿರಿಯಡ್ಕ ಪೊಲೀಸ್ ಠಾಣೆಗೆ ವಿಡಿಯೋ ಸಹಿತ ದೂರು ನೀಡಿದ್ದ ಎನ್ನಲಾಗಿದೆ. ಇದೇ ವೇಳೆ ಯುವತಿಯ ಮನೆಯವರು ಪ್ರದೀಪ್ ವಿರುದ್ಧ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಮಾನಭಂಗಕ್ಕೆ ಯತ್ನಿಸಿದ ಆರೋಪದಡಿ ದೂರು ದಾಖಲಿಸಿದ್ದರು.
ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದ ಪ್ರದೀಪ್‌ನನ್ನು ಅ.27ರಂದು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಶನಿವಾರ ಸಂಜೆ ಶೌಚಾಲಯಕ್ಕೆ ತೆರಳಿದ್ದ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಾನು ಧರಿಸಿದ್ದ ಬಟ್ಟೆಯ ಲಾಡಿಯನ್ನು ಬಳಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.
ಇಬ್ಬರು ಪೊಲೀಸರ ಕಣ್ಗಾವಲಿದ್ದರೂ ದುರಂತ
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪ್ರದೀಪ್‌ನ ಮೇಲೆ ನಿಗಾ ಇರಿಸುವ ಉದ್ದೇಶದಿಂದ ಇಬ್ಬರು ಪೊಲೀಸರನ್ನು ನಿಯೋಜಿಸಲಾಗಿತ್ತು ಎನ್ನಲಾಗಿದೆ. ಆದರೂ ಆಸ್ಪತ್ರೆಯ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ.
ಆತ್ಮಹತ್ಯೆಗೂ ಮುನ್ನ ತನ್ನ ಮೇಲೆ ನಡೆದ ಹಲ್ಲೆಗೆ ಸಂಬಂಧಿಸಿದಂತೆ ದೂರು ದಾಖಲಾಗಿದೆಯೇ ಎಂದು ಪ್ರದೀಪ್ ಹಲವು ಬಾರಿ ದೂರವಾಣಿ ಮೂಲಕ ಹಿರಿಯಡ್ಕ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ವಿಚಾರಿಸಿದ್ದ ಎನ್ನಲಾಗಿದೆ.
ಈ ಹಿಂದೆ ಕೂಡ ಅತ್ಯಾಚಾರ ಯತ್ನದ ಪ್ರಕರಣವೊಂದರಲ್ಲಿ ಬಂಧನಕ್ಕೊಳಗಾಗಿದ್ದ ಪ್ರದೀಪ್, ಮತ್ತೊಮ್ಮೆ ಜೈಲು ಸೇರಬೇಕಾಗಬಹುದು ಎಂಬ ಆತಂಕದಲ್ಲಿದ್ದನೇ ಎಂಬ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ಪೊಲೀಸ್ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.
ಜಿಲ್ಲಾಸ್ಪತ್ರೆಗೆ ಧಾವಿಸಿದ ಶಾಸಕ, ಬಿಜೆಪಿ ಮುಖಂಡರು
ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿಯುತ್ತಿದ್ದಂತೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸೇರಿದಂತೆ ಬಿಜೆಪಿ ಮುಖಂಡರು ಉಡುಪಿ ಜಿಲ್ಲಾಸ್ಪತ್ರೆಗೆ ಧಾವಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಪ್ರದೀಪ್ ತನ್ನ ಮೇಲೆ ನಡೆದ ಹಲ್ಲೆಯ ಕುರಿತು ಹಿರಿಯಡ್ಕ ಪೊಲೀಸ್ ಠಾಣೆಗೆ ದೂರು ನೀಡಲು ಮುಂದಾಗಿದ್ದರೂ ಪೊಲೀಸರು ಅದನ್ನು ಸ್ವೀಕರಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು ಎನ್ನಲಾಗಿದೆ.
ಘಟನೆಯ ಕುರಿತು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದು, ಆಸ್ಪತ್ರೆಯ ಭದ್ರತಾ ವ್ಯವಸ್ಥೆ, ಪೊಲೀಸರ ಕರ್ತವ್ಯ ನಿರ್ವಹಣೆ ಹಾಗೂ ಆತ್ಮಹತ್ಯೆಗೆ ಕಾರಣವಾದ ಅಂಶಗಳ ಬಗ್ಗೆ ತನಿಖೆ ನಡೆಯಬೇಕಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top