ಎಣ್ಣೆಹೊಳೆ ಏತ ನೀರಾವರಿ ಯೋಜನೆಗೆ ವಿದ್ಯುತ್ ಸಂಪರ್ಕ ಮರುಸ್ಥಾಪನೆ

Picture of RB NEWS

RB NEWS

Bureau Report


ಕಾರ್ಕಳ: ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಂಡಿದ್ದ ಎಣ್ಣೆಹೊಳೆ ಏತ ನೀರಾವರಿ ಯೋಜನೆಗೆ ಮತ್ತೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದ್ದು, ಇಂದು ಬೆಳಿಗ್ಗೆಯಿಂದ ನೀರು ಹರಿಸುವ ಕಾರ್ಯ ಪುನರಾರಂಭಗೊಂಡಿದೆ.


ಈ ಯೋಜನೆಯ ವಿದ್ಯುತ್ ಸಂಪರ್ಕ ಕಡಿತಗೊಂಡ ಹಿನ್ನೆಲೆಯಲ್ಲಿ ರೈತರು ಆತಂಕ ವ್ಯಕ್ತಪಡಿಸಿದ್ದರು. ವಿಷಯ ತಿಳಿದ ತಕ್ಷಣ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ಸರ್ಕಾರದ ಉನ್ನತ ಮಟ್ಟದಲ್ಲಿ ಮನವಿ ಸಲ್ಲಿಸಿದರು. ಉಪಮುಖ್ಯಮಂತ್ರಿ ಹಾಗೂ ಬೃಹತ್ ನೀರಾವರಿ ಸಚಿವರಾದ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮೆಸ್ಕಾಂ (KEB) ಅಧ್ಯಕ್ಷರಾದ ಹರೀಶ್ ಕುಮಾರ್ ಹಾಗೂ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಸಮಸ್ಯೆ ಕುರಿತು ಮನವಿ ಮಾಡಿದರು.


ಸಮಸ್ಯೆಯ ಗಂಭೀರತೆಯನ್ನು ಮನಗಂಡ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಕ್ಷಣ ಇಲಾಖಾ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅವರ ವಿಶೇಷ ಆಸಕ್ತಿಯಿಂದ ತಾಂತ್ರಿಕ ಅಡಚಣೆಗಳನ್ನು ನಿವಾರಿಸಿ ಇಂದು ಬೆಳಿಗ್ಗೆಯಿಂದಲೇ ವಿದ್ಯುತ್ ಪೂರೈಕೆ ಮರುಸ್ಥಾಪಿಸಲಾಯಿತು.
ವಿದ್ಯುತ್ ಸಂಪರ್ಕ ಕಲ್ಪನೆಯಾದ ಬಳಿಕ ಆಣೆಕಟ್ಟು ಮೋಟಾರ್‌ಗಳು ಕಾರ್ಯಾರಂಭ ಮಾಡಿದ್ದು, ನದಿಯಿಂದ ನೀರನ್ನು ಎತ್ತಿ ಕೆರೆಗಳಿಗೆ ಹರಿಸಲಾಗುತ್ತಿದೆ. ಬೇಸಿಗೆಯ ಆರಂಭದಲ್ಲಿ ನೀರು ಲಭ್ಯವಾಗಿರುವುದು ರೈತರಲ್ಲಿ ಸಂತಸ ತಂದಿದೆ.
ಈ ಕುರಿತು ಪ್ರತಿಕ್ರಿಯಿಸಿದ ಉದಯ ಶೆಟ್ಟಿ ಮುನಿಯಾಲು, “ರೈತರ ಹಿತ ಕಾಪಾಡುವುದು ನಮ್ಮ ಮೊದಲ ಆದ್ಯತೆ. ಯೋಜನೆ ಸ್ಥಗಿತಗೊಂಡ ಮಾಹಿತಿ ಬಂದ ತಕ್ಷಣ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಿ ಸಮಸ್ಯೆ ಪರಿಹರಿಸಿದ್ದೇವೆ,” ಎಂದು ತಿಳಿಸಿದ್ದಾರೆ.
ಯೋಜನೆಯ ಮರುಾರಂಭದಿಂದ ಈ ಭಾಗದ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ಸಿಗುವ ನಿರೀಕ್ಷೆಯಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top