ಕಾರ್ಕಳ : ಕ್ರಿಯೇಟಿವ್ ಕಾಲೇಜಿನ ಸಹಕಾರದೊಂದಿಗೆ ಸ್ವಚ್ಛತಾ ಅಭಿಯಾನ

Picture of RB NEWS

RB NEWS

Bureau Report

   ಕಾರ್ಕಳ :  ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ ರಾಷ್ಟ್ರೀಯ ಸೇವಾ ಯೋಜನೆ ಪ್ರಾಂತೀಯ ಕೇಂದ್ರ ಬೆಂಗಳೂರು, ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ) ರಾಷ್ಟ್ರೀಯ ಸೇವಾ ಯೋಜನೆ ಕೋಶ ಬೆಂಗಳೂರು,  ರಾಷ್ಟ್ರೀಯ ಸೇವಾ ಯೋಜನಾ ಘಟಕ ಕ್ರಿಯೇಟಿವ್ ಪದವಿಪೂರ್ವ ಕಾಲೇಜು, ಕಾರ್ಕಳ ಇದರ ಸಂಯುಕ್ತಾಶ್ರಯದಲ್ಲಿ ಒಂದು ದಿನದ ಸ್ವಚ್ಛತಾ ಕಾರ್ಯಕ್ರಮವನ್ನು ಸಪ್ಟೆಂಬರ್ 1, 2024ರಂದು ಹಮ್ಮಿಕೊಳ್ಳಲಾಯಿತು. 

   ಶಾಸಕ ವಿ. ಸುನೀಲ್‌ಕುಮಾರ್ ಕಾರ್ಯಕ್ರಮವನ್ನು  ಉದ್ಘಾಟಿಸಿ  ಮಾತನಾಡಿ 'ಎಲ್ಲರೂ ಸ್ವಚ್ಛತೆಯನ್ನು ಕಾಪಾಡುವುದರಿಂದ ಆರೋಗ್ಯಯುತ ಸಮಾಜ ನಿರ್ಮಾಣ ಮಾಡಲು ಸಹಕಾರಿಯಾಗುತ್ತದೆ. ಸ್ವಚ್ಛತೆ ಇರುವ ಕಡೆ ಸಾಂಕ್ರಾಮಿಕ ಕಾಯಿಲೆಗಳು ಹರಡದಂತೆ ತಡೆಗಟ್ಟಬಹುದಾಗಿದೆ. ನಮ್ಮ ಮನೆ, ಗ್ರಾಮ, ತಾಲೂಕು, ಜಿಲ್ಲೆ, ರಾಜ್ಯಗಳಲ್ಲಿ ಸ್ವಚ್ಛತೆಯನ್ನು ಕಾಪಾಡಿದಾಗಲೇ ಸ್ವಚ್ಛ ಭಾರತವಾಗಿ ಮೂಡಿ ಬರಲು ಸಾಧ್ಯ' ಎಂದರು. 

    ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕ ಡಾ. ಬಿ ಗಣನಾಥ ಶೆಟ್ಟಿ  ಪ್ರಾಸ್ತಾವಿಕ ಮಾತುಗಳನ್ನಾಡಿ,   ಪರಿಸರವನ್ನು ಸ್ವಚ್ಛವಾಗಿ ಇಡುವುದು ನಮ್ಮೆಲ್ಲರ ಕರ್ತವ್ಯ. ಪ್ರಕೃತಿಯನ್ನು ನಮ್ಮ ಮುಂದಿನ ಪೀಳಿಗೆಗೆ ಉಳಿಸಿಕೊಡಬೇಕಾದರೆ ಸ್ವಚ್ಛತೆಯನ್ನು ಕಾಯ್ದುಕೊಳ್ಳಬೇಕು. ಇದು ನಾವು ಅವರಿಗೆ ನೀಡುವ ಉತ್ತಮ ಉಡುಗೊರೆಯಾಗಿದೆ. ಮಕ್ಕಳು ಬೆಳಗಿದರೆ ಸಮಾಜ ಬೆಳಗುತ್ತದೆ ' ಎಂದರು. 

   ಹಿರ್ಗಾನ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ  ಸಂತೋಷ್ ಶೆಟ್ಟಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಎ ಮತ್ತು ಬಿ ಘಟಕದ ಅಧ್ಯಕ್ಷರುಗಳಾದ  ಸತೀಶ್ ಪೂಜಾರಿ ಹಾಗೂ ಸುಭಾಷ್, ಸಂಸ್ಥೆಯ ಸಂಸ್ಥಾಪಕ ಆದರ್ಶ ಎಂ ಕೆ, ಪ್ರಾಂಶುಪಾಲ  ಗಣಪತಿ ಭಟ್, ರಾಷ್ಟ್ರೀಯ ಸೇವಾ ಯೋಜನಾ ಸಂಯೋಜನಾಧಿಕಾರಿಗಳು, ಅರ್ಥಶಾಸ್ತ್ರ ಉಪನ್ಯಾಸಕ ಉಮೇಶ್, ಬೋಧಕ ಮತ್ತು ಬೋಧಕೇತರ ವೃಂದದವರು, ವಾಣಿಜ್ಯ ವಿಭಾಗದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. 

ಜೀವಶಾಸ್ತ್ರ ಉಪನ್ಯಾಸಕ ಲೋಹಿತ್ ಎಸ್ ಕೆ ನಿರೂಪಿಸಿ, ವಂದಿಸಿದರು.

  ಜೋಡುರಸ್ತೆಯಿಂದ ಹಿರ್ಗಾನ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಜೂರುವರೆಗೆ, ಮಾವಿನಕಟ್ಟೆಯಿಂದ ಕಾನಂಗಿ ವೆಂಕಟೇಶ್ವರ ದೇವಸ್ಥಾನದವರೆಗೆ ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಲಾಯಿತು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top