ಕಾರ್ಕಳ ಬಾಹುಬಲಿ ಮಹಾಮಸ್ತಕಾಭಿಷೇಕ ಮಹೋತ್ಸವ: ನ.1ರಂದು ಅಟ್ಟಳಿಗೆ ಮುಹೂರ್ತ

Picture of RB NEWS

RB NEWS

Bureau Report


ಕಾರ್ಕಳ: ಫೆಬ್ರವರಿ 18ರಿಂದ 28ರವರೆಗೆ ನಡೆಯಲಿರುವ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವದ ಪೂರ್ವಭಾವಿಯಾಗಿ ನವೆಂಬರ್ 1ರಂದು ಅಟ್ಟಳಿಗೆ ಮುಹೂರ್ತ ಕಾರ್ಯಕ್ರಮ ನಡೆಯಲಿದೆ.
ಕಾರ್ಕಳದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಸನ್ನಿಧಿಯಲ್ಲಿ ನವೆಂಬರ್ 1ರ ಭಾನುವಾರ ಬೆಳಿಗ್ಗೆ 8.35ರಿಂದ 8.55ರವರೆಗೆ ಶುಭ ಮುಹೂರ್ತದಲ್ಲಿ ಅಟ್ಟಳಿಗೆ ಮುಹೂರ್ತ ನೆರವೇರಲಿದೆ. ಅಂದು ಬೆಳಿಗ್ಗೆ 7.30ರಿಂದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ಪಾದಾಭಿಷೇಕ ನಡೆಯಲಿದೆ.
ಕಾರ್ಯಕ್ರಮದಲ್ಲಿ ಪರಮಪೂಜ್ಯ 108 ಏಲಾಚಾರ್ಯ ಮುನಿಶ್ರೀ ಪ್ರಸನ್ನಸಾಗರ ಮಹಾರಾಜರು ಪಾವನ ಸಾನ್ನಿಧ್ಯ ವಹಿಸಲಿದ್ದಾರೆ. ಕಾರ್ಕಳ ಶ್ರೀ ಜೈನ ಮಠದ ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ಹಾಗೂ ಸೊಂದಾ ಶ್ರೀ ಜೈನ ಮಠದ ಸ್ವಸ್ತಿಶ್ರೀ ಭಟ್ಟಾಕಲಂಕ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ದಿವ್ಯ ಉಪಸ್ಥಿತಿ ಇರಲಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಾರ್ಗದರ್ಶನ ನೀಡಲಿದ್ದು, ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಸಮಿತಿಯ ಕಾರ್ಯಾಧ್ಯಕ್ಷರಾದ ಸಹಕಾರರತ್ನ ಡಾ. ಎಂ. ಎನ್. ರಾಜೇಂದ್ರ ಕುಮಾರ್ ನೇತೃತ್ವ ವಹಿಸಲಿದ್ದಾರೆ. ಇವರು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರೂ ಆಗಿದ್ದಾರೆ.
ಇದರ ಅಂಗವಾಗಿ ಅಕ್ಟೋಬರ್ 31ರ ಶನಿವಾರ ಬೆಳಿಗ್ಗೆ 8 ಗಂಟೆಯಿಂದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಸನ್ನಿಧಿಯಲ್ಲಿ ಭಕ್ತಾಮರ ಆರಾಧನೆ ನಡೆಯಲಿದೆ.
ಮಹಾಮಸ್ತಕಾಭಿಷೇಕ ಮಹೋತ್ಸವದ ಸಿದ್ಧತೆಗಳಿಗೆ ಚಾಲನೆ ನೀಡುವ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಧರ್ಮಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪುಣ್ಯಭಾಗಿಗಳಾಗುವಂತೆ ಸಮಿತಿಯ ವತಿಯಿಂದ ವಿನಂತಿಸಲಾಗಿದೆ.
ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಸಮಿತಿಯ ಪರವಾಗಿ ಸಮಿತಿಯ ಪದಾಧಿಕಾರಿಗಳಾದ ಶ್ರೀ ಎ. ಮೋಹನ ಪಡಿವಾಳ್ ಹಾಗೂ ಪ್ರಧಾನ ಕಾರ್ಯದರ್ಶಿ ಶ್ರೀ ಪುಷ್ಪರಾಜ್ ಜೈನ್, ಮಂಗಳೂರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top