ಕಾರ್ಕಳ : ತಾಲೂಕು ಕಾನೂನು ಸೇವೆಗಳ ಸಮಿತಿ ಕಾರ್ಕಳ, ನ್ಯಾಯವಾದಿಗಳ ಸಂಘ (ರಿ.), ಕಾರ್ಕಳ ಮತ್ತು ದುರ್ಗ ಗ್ರಾಮ ಪಂಚಾಯತ್ ದುರ್ಗ ಇದರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಗ್ರಾಹಕರ ಹಕ್ಕು ದಿನಾಚರಣೆ ಸಲುವಾಗಿ ಉಚಿತ ಕಾನೂನು ಅರಿವು ಮಾಹಿತಿ ಕಾರ್ಯಕ್ರಮವು ಮಾಚ್೯ 15ರಂದು ದುರ್ಗ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿತು.
ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಹಿರಿಯ ಸಿವಿಲ್ ಮತ್ತು ಎ.ಸಿ.ಜೆ.ಎಂ. ನ್ಯಾಯಾಧೀಶೆ ಶರ್ಮಿಳಾ ಸಿ.ಎಸ್.ರವರು, ಗ್ರಾಹಕರು ತಮ್ಮ ಹಕ್ಕುಗಳನ್ನು ತಿಳಿದುಕೊಳ್ಳುವುದು ಅವಶ್ಯ ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಮಾತನಾಡಿದ ನ್ಯಾಯವಾದಿಗಳ ಸಂಘದ ಉಪಾಧ್ಯಕ್ಷರಾದ ಕೆ. ಹರೀಶ್ ಅಧಿಕಾರಿ, ವಿಶ್ವ ಗ್ರಾಹಕ ದಿನಾಚರಣೆಯ ಕಲ್ಪನೆಯು 1962ರಲ್ಲಿ ಅಮೆರಿಕದ ಅಧ್ಯಕ್ಷರಾಗಿದ್ದ ಜಾನ್ ಎಫ್ ಕೆನಡಿಯವರಿಂದ ಬಂದು, ಭಾರತದಲ್ಲಿ ಡಿಸೆಂಬರ್ 24ರಂದು ರಾಷ್ಟ್ರೀಯ ಗ್ರಾಹಕರ ಹಕ್ಕು ದಿನಾಚರಣೆಯನ್ನು ಮತ್ತು ಮಾರ್ಚ್ 15ರಂದು ವಿಶ್ವ ಗ್ರಾಹಕರ ಹಕ್ಕು ದಿನಾಚರಣೆಯನ್ನ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ನ್ಯಾಯವಾದಿ ಕೌಸಲ್ಯ, ಗ್ರಾಹಕರು ಮೋಸ ಹೋದಾಗ ಯಾವ ರೀತಿ ಪರಿಹಾರ ಪಡೆಯಬಹುದು ಎಂಬುದಾಗಿ ವಿವರವಾಗಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ದುರ್ಗ ಗ್ರಾಮ ಪಂಚಾಯತ್ ಅಧ್ಯಕ್ಷೆ ದೇವಕಿ, ತಾಲೂಕು ಕಾನೂನು ನೆರವು ಸಮಿತಿಗೆ ಧನ್ಯವಾದ ಹೇಳಿ ಇನ್ನು ಹೆಚ್ಚಿನ ಕಾರ್ಯಕ್ರಮಗಳನ್ನು ದುರ್ಗ ಪಂಚಾಯತ್ನಲ್ಲಿ ಹಮ್ಮಿಕೊಳ್ಳಬೇಕೆಂದು ವಿನಂತಿಸಿದರು.
ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಹೇಶ್ ರಾವ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಂಜು ಸ್ವಾಗತಿಸಿ, ಗ್ರಾಮ ಪಂಚಾಯತ್ ಕಾರ್ಯದರ್ಶಿ ಸುಬ್ಬಯ್ಯ ಕಾರ್ಯಕ್ರಮ ನಿರೂಪಿಸಿ ವಂದನಾರ್ಪಣೆಗೈದರು.




































