ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳಿಂದ ಜೈಲು ವಾರ್ಡರ್ ನ ಮಾರಣಾಂತಿಕ ಹಲ್ಲೆ
ಬೆಂಗಳೂರು: ಭಜರಂಗದಳದ ಮುಖಂಡ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ಆರೋಪಿಗಳು ಜೈಲು ವಾರ್ಡರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸೆಪ್ಟೆಂಬರ್ 2ರಂದು ಬೆಳಗ್ಗೆ ಸುಮಾರು 11.30ರ ವೇಳೆಗೆ ಪರಪ್ಪನ ಅಗ್ರಹಾರ ಜೈಲಿನ ಶಿಕ್ಷಾ ಬಂಧಿ ವಿಭಾಗದಲ್ಲಿ ಘಟನೆ ನಡೆದಿದೆ. ವಾರ್ಡರ್ ಮಂಜುನಾಥ್ ಅವರೇ ಹಲ್ಲೆಗೊಳಗಾದವರು. ಜೈಲಿನ ಭದ್ರತಾ ವಿಭಾಗದಿಂದ ಅನುಬಂಧ-1 ಕಾರಾಗೃಹಕ್ಕೆ ಕೆಲ ಬಂಧಿಗಳನ್ನು ಸ್ಥಳಾಂತರಿಸಲಾಗಿತ್ತು. ಈ ಸಂದರ್ಭದಲ್ಲಿ ವಾರ್ಡರ್ ಮಂಜುನಾಥ್ ಅವರು ಬಂಧಿಗಳ ವಸ್ತುಗಳನ್ನು ಪರಿಶೀಲನೆ ನಡೆಸಿದ್ದರು. ಹೆಚ್ಚುವರಿ ವಸ್ತುಗಳನ್ನು ತೆಗೆದುಕೊಂಡು ಹೋಗಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಆರೋಪಿಗಳು ಆಕ್ರೋಶಗೊಂಡು ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳಾದ ಮೊಹಮ್ಮದ್ ಮುಜಾಮಿಲ್, ಅಬ್ದುಲ್ ಸಫ್ವಾನ್, ಮೊಹಮ್ಮದ್ ಜಿಯಾನ್, ನಿಯಾಜ್ ಹಾಗೂ ಕಲಂದರ್ ಶಾಫಿ ಸೇರಿದಂತೆ ಕೆಲವರು ಮಂಜುನಾಥ್ ಅವರನ್ನು ಬ್ಯಾರಕ್ನ ಕೊಠಡಿ ಸಂಖ್ಯೆ 4ಕ್ಕೆ ಎಳೆದೊಯ್ದು ಹಲ್ಲೆ ನಡೆಸಿದ್ದಾರೆ. ಬಳಿಕ ಕುತ್ತಿಗೆಯನ್ನು ಬಲವಾಗಿ ಹಿಸುಕಿ ಉಸಿರುಗಟ್ಟಿಸಿ ಕೊಲೆ ಮಾಡಲು ಯತ್ನಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಹಲ್ಲೆಯಿಂದ ಗಾಯಗೊಂಡ ಮಂಜುನಾಥ್ ಅವರನ್ನು ಕರ್ತವ್ಯದಲ್ಲಿದ್ದ ಜೈಲು ಅಧಿಕಾರಿಗಳು ಹಾಗೂ ಸಿಬ್ಬಂದಿ ರಕ್ಷಿಸಿ ಚಿಕಿತ್ಸೆಗಾಗಿ ಕರೆದೊಯ್ದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.