
ನಿಟ್ಟೆ ತಾಂತ್ರಿಕ ಶಿಕ್ಷಣ ಸಂಸ್ಥೆಯಲ್ಲಿ ಗ್ರಂಥಾಲಯ ಸಪ್ತಾಹ – 2026 ಉದ್ಘಾಟನೆ
ನಿಟ್ಟೆ: ನಿಟ್ಟೆ ತಾಂತ್ರಿಕ ಶಿಕ್ಷಣ ಸಂಸ್ಥೆಯ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಆಶ್ರಯದಲ್ಲಿ ಗ್ರಂಥಾಲಯ ಸಪ್ತಾಹ – 2026 ಕಾರ್ಯಕ್ರಮವು ಇಂದು ಭವ್ಯವಾಗಿ ಉದ್ಘಾಟನೆಗೊಂಡಿತು.
ಕಾರ್ಯಕ್ರಮವನ್ನು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ನಿರಂಜನ್ ಎನ್. ಚಿಪ್ಲೂನ್ಕರ್ ಅವರು ಉದ್ಘಾಟಿಸಿ, ಗ್ರಂಥಾಲಯ ಸಪ್ತಾಹದ ಅಂಗವಾಗಿ ಆಯೋಜಿಸಲಾದ ವಿವಿಧ ಸ್ಪರ್ಧೆಗಳಿಗೆ ಚಾಲನೆ ನೀಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ನಾಗೇಶ್ ಪ್ರಭು ಅವರು ದೀಪ ಪ್ರಜ್ವಲಿಸುವ ಮೂಲಕ ಪುಸ್ತಕ ಪ್ರದರ್ಶನವನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಗ್ರಂಥಾಲಯ ಸಿಬ್ಬಂದಿಗಳು, ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಗ್ರಂಥಪಾಲಕರಾದ ಡಾ. ಪ್ರೀತಂ ಶೆಟ್ಟಿ ಕೆ. ವಿ. ಅವರು ಸ್ವಾಗತ ಭಾಷಣ ಮಾಡಿ ಕಾರ್ಯಕ್ರಮದ ಪ್ರಸ್ತಾವನೆಗೈದರು. ಸಹಾಯಕ ಗ್ರಂಥಪಾಲಕರಾದ ಸುಧಾಕರ್ ಕೆ. ಅವರು ವಂದಿಸಿದರು. ಇನ್ನೋರ್ವ ಸಹಾಯಕ ಗ್ರಂಥಪಾಲಕರಾದ ಸತೀಶ್ ಶೆಟ್ಟಿ ಅವರು ಕಾರ್ಯಕ್ರಮ ನಿರ್ವಹಿಸಿದರು. ಗ್ರಂಥಾಲಯ ಸಿಬ್ಬಂದಿಗಳು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.














