ಬಿಜೆಪಿ ಸರಕಾರ ಬಿಡುಗಡೆಗೊಳಿಸಿದ ರೂ.75 ಕೋಟಿ ಅನುದಾನಕ್ಕೆ ಬ್ರೇಕ್ : ಆಕ್ರೋಶಗೊಂಡ ಶಾಸಕ ಸುನೀಲ್
ಕಾರ್ಕಳ : ಬಿಜೆಪಿ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಬಸವರಾಜು ಬೊಮ್ಮಾಯಿಯವರು ಕಾರ್ಕಳ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ವಿವಿಧ ಕಾಮಗಾರಿಗಳಿಗೆ ಬಿಡುಗಡೆಗೊಳಿಸಿದ್ದ ರೂ. 75 ಕೋಟಿ ಅನುದಾನವನ್ನು ಪ್ರಸಕ್ತ ರಾಜ್ಯದಲ್ಲಿ ಅಧಿಕಾರದಲ್ಲಿ ಇರುವ ಕಾಂಗ್ರೆಸ್ ಸರ್ಕಾರವು ತಡೆದಿದೆ ಎಂದು ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಅವರು ಸರಕಾರ ವಿರೋಧ ಹರಿಹಾಯ್ದು ಹೇಳಿಕೆಯೊಂದನ್ನು ಮಾಧ್ಯಮಕ್ಕೆ ಬಿಡುಗಡೆಗೊಳಿಸಿದ್ದಾರೆ.
ಸರಕಾರದ ಈ ನಡಡಯಿಂದಾಗಿ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳಿಗೆ ತೀವ್ರ ಹಿನ್ನಡೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ತ್ವರಿತಗತಿಯಲ್ಲಿ ಬಾಕಿ ಉಳಿದ ಅನುದಾನವನ್ನು ಬಿಡುಗಡೆಗೊಳಿಸಬೇಕೆಂದು ಶಾಸಕ ಸುನಿಲ್ ಕುಮಾರ್ ಸಿಎಂ ಅವರಿಗೆ ಆಗ್ರಹಿಸಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಇಂಜಿನಿಯರಿАಗ್ ಇಲಾಖೆ, ಪಂಚಾಯತ್ರಾಜ್ ಲೋಕೋಪಯೋಗಿ ಇಲಾಖೆ, ಬೃಹತ್ ನೀರಾವರಿ ಇಲಾಖೆ (ವಾರಾಹಿ), ಪ್ರವಾಸೋದ್ಯಮ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಇಂಧನ ಇಲಾಖೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸೇರಿದಂತೆ ಇತರ ಇಲಾಖೆಗಳಿಂದ ಮಂಜೂರಾತಿಯಾದ ಕಾಮಗಾರಿಗಳ ಪೈಕಿ ಕೆಲವು ಕಾಮಗಾರಿಗಳು ಆಡಳಿತಾತ್ಮಕ ಅನುಮೋದನೆ ಆಗಿದ್ದು, ಕೆಲವು ಕಾಮಗಾರಿಗಳು ಟೆಂಡರ್ ಪ್ರಕ್ರಿಯೆ ಮುಗಿದಿರುತ್ತದೆ, ಕೆಲವು ಟೆಂಡರ್ ಮುಗಿದು ಅಗ್ರಿಮೆಂಟ್ ಹಂತದಲ್ಲಿದ್ದವು.
2023ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯನೇತೃತ್ವದ ಕಾಂಗ್ರೆಸ್ ಸರ್ಕಾರವು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರಾಗಿದ್ದ ಎಲ್ಲಾ ಕಾಮಗಾರಿಗಳ ಅನುದಾನವನ್ನು ತಡೆಹಿಡಿದಿದೆ. ಇದರಿಂದಾಗಿ ಕ್ಷೇತ್ರದ ಮೂಲಭೂತ ಸೌಕರ್ಯ ಸೇರಿದಂತೆ ಇತರ ಅಭಿವೃದ್ಧಿ ಕಾರ್ಯಗಳು ನೆನೆಗುದ್ದಿಗೆ ಬಿದ್ದಿದೆ ಎಂದು ಆರೋಪಿಸಿದ್ದಾರೆ.
ತಡೆ ಹಿಡಿದ ಅನುದಾನ ಈವರೆಗೆ ಬಿಡುಗಡೆಯಾಗಿರುವುದಿಲ್ಲ. ಆದ್ದರಿಂದ ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಹಿಂದಿನ ಸರ್ಕಾರದ ಅವಧಿಯಲ್ಲಿ ಮಂಜೂರಾತಿಗೊಡು ಬಿಡುಗಡೆಯಾಗಿದ್ದ ವಿವಿಧ ಇಲಾಖೆಗಳ ಸುಮಾರು 75 ಕೋಟಿ ಗೂ ಅಧಿಕ ಮೊತ್ತದ ಬಾಕಿ ಅನುದಾನವನ್ನು ಕೂಡಲೇ ಬಿಡುಗಡೆಮಾಡುವಂತೆ ಶಾಸಕ ಸುನಿಲ್ ಕುಮಾರ್ ಮುಖ್ಯಮಂತ್ರಿಗಳಿಗೆ ಮನವಿ ಪತ್ರದ ಮೂಲಕ ಆಗ್ರಹಿಸಿದ್ದಾರೆ






































