





ಮಿಯ್ಯಾರಿನಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಮೃತ್ಯು, ಐವರ ಸ್ಥಿತಿ ಗಂಭೀರ

ಕಾರ್ಕಳ : ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಮಿಯ್ಯಾರು ಸಮೀಪ ಶುಕ್ರವಾರ ಭೀಕರ ರಸ್ತೆ ಅಪಘಾತ ಸಂಭವಿಸಿ, ತೂಫಾನ್ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಇನ್ನೂ ಐದು ಮಂದಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ.
ಧರ್ಮಸ್ಥಳಕ್ಕೆ ತೆರಳುತ್ತಿದ್ದ ತೂಫಾನ್ ವಾಹನ ಹಾಗೂ ಕಾರ್ಕಳ ಕಡೆಗೆ ಬರುತ್ತಿದ್ದ ಖಾಸಗಿ ಬಸ್ಸಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅಪಘಾತದ ತೀವ್ರತೆಯಿಂದ ತೂಫಾನ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಮೃತರು ಹಾಗೂ ಗಾಯಾಳುಗಳು ಗುಲ್ಬರ್ಗ ಮೂಲದವರಾಗಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಯ ಮಾಹಿತಿ ಪಡೆದ ತಕ್ಷಣ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಕಾರ್ಕಳ ಬಳಿ ಭೀಕರ ರಸ್ತೆ ಅಪಘಾತ:
ಖಾಸಗಿ ಬಸ್–ತೂಫಾನ್ ಮುಖಾಮುಖಿ ಡಿಕ್ಕಿ
ಮೂವರು ಸ್ಥಳದಲ್ಲೇ ಸಾವು, 9 ಮಂದಿಗೆ ಗಾಯ
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯಾರು ಗ್ರಾಮದ ಕಂಬಳ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 169ಎ ಯಲ್ಲಿ ಶುಕ್ರವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಧರ್ಮಸ್ಥಳದಿಂದ ಕಾರ್ಕಳಕ್ಕೆ ಆಗಮಿಸುತ್ತಿದ್ದ ಖಾಸಗಿ ಬಸ್ ಹಾಗೂ ಕಾರ್ಕಳದಿಂದ ಧರ್ಮಸ್ಥಳದತ್ತ ತೆರಳುತ್ತಿದ್ದ ತೂಫಾನ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ತೂಫಾನ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.
ಅಪಘಾತದಲ್ಲಿ ಕಲಬುರಗಿ ಜಿಲ್ಲೆಯ ಖಾನಾಪೂರ ಮೂಲದ 12 ಮಂದಿ ಯಾತ್ರಿಕರ ಪೈಕಿ ಚಾಲಕ ಮಣ್ಣಪ್ಪ, ಚೇತನ್ (27) ಹಾಗೂ ರೋಹಿತ್ (28) ಮೃತಪಟ್ಟಿದ್ದಾರೆ. ಉಳಿದ 9 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಕಾರ್ಕಳ ಹಾಗೂ ಉಡುಪಿ ನಗರದ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಗಾಯಗೊಂಡವರ ವಿವರ:
ಮಲ್ಲಮ್ಮ (45), ಸಂಗೀತಾ (40), ಕವಿತಾ (38), ಬಸವರಾಜ್ (56), ಕಿಶೋರ್ (28), ಲಕ್ಷ್ಮೀ (25), ಜ್ಯೋತಿ (25), ಜಯಲಕ್ಷ್ಮೀ (24) ಹಾಗೂ ಕುಶಾಲ್ (2).
ಗುಲ್ಬರ್ಗ ಮೂಲದ ಯಾತ್ರಿಕರು ತೂಫಾನ್ ವಾಹನದಲ್ಲಿ ಧರ್ಮಸ್ಥಳದತ್ತ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಅವೈಜ್ಞಾನಿಕ ಕಾಮಗಾರಿಗೆ ಸಾರ್ವಜನಿಕರ ಆಕ್ರೋಶ
ರಾಷ್ಟ್ರೀಯ ಹೆದ್ದಾರಿ 169ಎ ಯಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ಕಾಮಗಾರಿಯೇ ಇಂತಹ ಅಪಘಾತಗಳಿಗೆ ಕಾರಣವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಹೆದ್ದಾರಿಯಲ್ಲಿ ಸೂಕ್ತ ದಿಕ್ಕು ಸೂಚಕ ಫಲಕಗಳ ಕೊರತೆ, ಸರಿಯಾದ ಡಿವೈಡರ್ಗಳಿಲ್ಲದಿರುವುದು ಹಾಗೂ ಏಕಮುಖ ಸಂಚಾರ ವ್ಯವಸ್ಥೆಯನ್ನು ಸಮರ್ಪಕವಾಗಿ ಜಾರಿಗೊಳಿಸದಿರುವುದರಿಂದ ಅಪಘಾತಗಳು ಹೆಚ್ಚಾಗುತ್ತಿವೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಮಗಾರಿ ನಡೆಯುತ್ತಿದ್ದರೂ ವಾಹನ ಸಂಚಾರಕ್ಕೆ ಸ್ಪಷ್ಟ ನಿಯಮಗಳಿಲ್ಲದೆ, ಎರಡು ದಿಕ್ಕಿನಿಂದ ವಾಹನಗಳು ಮುಖಾಮುಖಿಯಾಗಿ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲೆಯ ನಾನಾ ಕಡೆಗಳಿಂದ 108 ಅಂಬುಲೆನ್ಸ್ ಘಟನಾ ಸ್ಥಳಕ್ಕೆ ಅಗಮಿಸಿದೆ.
- ಕಾರ್ಕಳ, ಅಜೆಕಾರು, ಪೆರ್ಡೂರ್, ಶಿರ್ವ ಸೇರಿದಂತೆ ನಾಲ್ಕು 108 ಅಂಬುಲೆನ್ಸ್ ಅಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ಅದರ ಸಿಬ್ಬಂದಿಗಳು ನೆರವಾಗಿದ್ದಾರೆ.


















