ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ: ಚರ್ಚ್ ಪಾದ್ರಿ ಸಿಪ್ರಿಯನ್ ಪಿಂಟೋ ಬಂಧನ
RB NEWS
Bureau Report
ಪೋಕ್ಸೊ ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿ; ಸಕಲೇಶಪುರದಲ್ಲಿ ಪೊಲೀಸರ ಬಲೆಗೆ ಬಿದ್ದ ಆರೋಪಿ
ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ: ಚರ್ಚ್ ಪಾದ್ರಿ ಸಿಪ್ರಿಯನ್ ಪಿಂಟೋ ಬಂಧನ
ಚಿತ್ರ: ಎ ಐ
ಮಂಗಳೂರು, ಅ.18: ಚರ್ಚ್ಗೆ ಬರುತ್ತಿದ್ದ ಅಪ್ರಾಪ್ತ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಚರ್ಚ್ನ ಪಾದ್ರಿ ಸಿಪ್ರಿಯನ್ ಪಿಂಟೋ ಅವರನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆ ಮಂಗಳೂರಿನಿಂದ ಪರಾರಿಯಾಗಿದ್ದ ಆರೋಪಿಯನ್ನು ಸಕಲೇಶಪುರದಲ್ಲಿ ಸಂಬಂಧಿಕರ ಮನೆಯಲ್ಲಿ ಅಡಗಿದ್ದ ವೇಳೆ ಪೊಲೀಸರು ಪತ್ತೆಹಚ್ಚಿ ಮಂಗಳೂರಿಗೆ ಕರೆತಂದಿದ್ದಾರೆ.
ಚಾಕಲೇಟ್ ನೀಡಿ ಕಿರುಕುಳ ನೀಡಿದ ಆರೋಪ
ಚರ್ಚ್ಗೆ ಬರುತ್ತಿದ್ದ ಅಪ್ರಾಪ್ತ ಬಾಲಕರಿಗೆ ಚಾಕಲೇಟ್ ಕೊಡಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದರೆಂಬ ಗಂಭೀರ ಆರೋಪ ಪಾದ್ರಿ ಸಿಪ್ರಿಯನ್ ಪಿಂಟೋ ವಿರುದ್ಧ ಕೇಳಿಬಂದಿದೆ. ಈ ಸಂಬಂಧ ಇಬ್ಬರು ಬಾಲಕರು ನೀಡಿದ ದೂರಿನ ಆಧಾರದಲ್ಲಿ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ದಾಖಲಾಗುತ್ತಿದ್ದಂತೆಯೇ ಆರೋಪಿ ಪಾದ್ರಿ ಮಂಗಳೂರಿನಿಂದ ಪರಾರಿಯಾಗಿದ್ದರು. ಆರೋಪಿಯ ಪತ್ತೆಗಾಗಿ ಪೊಲೀಸರು ಬೆಂಗಳೂರು ಸೇರಿದಂತೆ ವಿವಿಧೆಡೆ ಹುಡುಕಾಟ ನಡೆಸಿದ್ದರು. ಇದೀಗ ಸಕಲೇಶಪುರದಲ್ಲಿ ಸಂಬಂಧಿಕರ ಮನೆಯಲ್ಲಿ ಅಡಗಿದ್ದ ಅವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಹೆತ್ತವರಿಗೆ ತಿಳಿಸಿದ ಬಾಲಕರು
ಪಾದ್ರಿಯಿಂದ ಕಿರುಕುಳವಾಗುತ್ತಿರುವ ಕುರಿತು ಬಾಲಕರು ತಮ್ಮ ಹೆತ್ತವರ ಬಳಿ ಹೇಳಿಕೊಂಡಿದ್ದರು ಎನ್ನಲಾಗಿದೆ. ಈ ವಿಚಾರ ಮಂಗಳೂರು ಬಿಷಪ್ ಅವರ ಗಮನಕ್ಕೂ ಬಂದಿತ್ತು. ಬಳಿಕ ಮೈಸೂರಿನ ಒಡನಾಡಿ ಸಂಸ್ಥೆಯವರು ಮಂಗಳೂರು ಪೊಲೀಸ್ ಕಮಿಷನರ್ಗೆ ದೂರು ನೀಡಿದ್ದರು. ತದನಂತರ ಸಂತ್ರಸ್ತ ಬಾಲಕರ ಕುಟುಂಬದವರು ಪೊಲೀಸರಿಗೆ ದೂರು ಸಲ್ಲಿಸಿದ್ದರು.
ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದು, ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.