ಮೀನುಗಾರರು ಹಾಗೂ ಶಿಕ್ಷಣಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡಿದ ಬಜೆಟ್ : ಉದಯ್ ಶೆಟ್ಟಿ ಮುನಿಯಾಲು

Picture of RB NEWS

RB NEWS

Bureau Report

ಕಾರ್ಕಳ: ರಾಜ್ಯದ ಬಹು ನಿರೀಕ್ಷಿತ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಡಿಸಿದ್ದು, ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ಕಾರ್ಕಳ ಕಾಂಗ್ರೆಸ್ ನಾಯಕ ಉದಯ್ ಶೆಟ್ಟಿ ಮುನಿಯಾಲು ತಿಳಿಸಿದ್ದಾರೆ. ಜನರ ಅನುಕೂಲತೆಗಳನ್ನು ಸೂಕ್ಷ್ಮವಾಗಿ ಪರಿಗಣಿಸಿ ಜನಪರ ಬಜೆಟ್ ಮಂಡಿಸಲಾಗಿದೆ ಎಂದು ಅವರು ಹೇಳಿದರು.
ಮೀನುಗಾರರ ಕಲ್ಯಾಣಕ್ಕೆ ವಿಶೇಷ ಒತ್ತು ನೀಡಲಾಗಿದ್ದು, ಮೀನುಗಾರರಿಗೆ ಉಚಿತವಾಗಿ ನೀಡುವ ಮೀನುಗಾರಿಕೆ ಸಲಕರಣೆ ಕಿಟ್‌ ದರವನ್ನು ₹10,000ರಿಂದ ₹20,000ಕ್ಕೆ ಹೆಚ್ಚಿಸಲಾಗಿದೆ. ಜೈವಿಕ ತಂತ್ರಜ್ಞಾನ ಉದ್ಯಮಗಳು, ನವೀನ ತಂತ್ರಜ್ಞಾನದ ಅಭಿವೃದ್ಧಿ ಹಾಗೂ ಸಮುದ್ರ ಕೃಷಿಯನ್ನು ಉತ್ತೇಜಿಸಲು ಮಂಗಳೂರಿನ ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ ಸೆಂಟರ್ ಆಫ್ ಎಕ್ಸಲೆನ್ಸ್ ಸ್ಥಾಪನೆಗೆ ಯೋಜನೆ ರೂಪಿಸಲಾಗಿದೆ.
ಇದೇ ವೇಳೆ ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ ಮತ್ತು ಚಿಕ್ಕಮಗಳೂರಿನಲ್ಲಿ ಮತ್ಸ್ಯದರ್ಶಿನಿಗಳ ಸ್ಥಾಪನೆ ಮಾಡಲಾಗುತ್ತದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಮೀನು ಮಾರುಕಟ್ಟೆ ನಿರ್ಮಿಸುವ ಯೋಜನೆಯೂ ಸರ್ಕಾರದ ಮುಂದಿದೆ ಎಂದು ತಿಳಿಸಿದ್ದಾರೆ.
ಶಿಕ್ಷಣ ಕ್ಷೇತ್ರಕ್ಕೂ ವಿಶೇಷ ಆದ್ಯತೆ ನೀಡಲಾಗಿದ್ದು, ₹3,900 ಕೋಟಿ ಅನುದಾನದಡಿ “ಉತ್ತಮ ಕಲಿಕೆ ಉಜ್ವಲ ಭವಿಷ್ಯ” ಎಂಬ ಘೋಷವಾಕ್ಯದೊಂದಿಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡಲು ಒಟ್ಟು 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಿಸುವ ಯೋಜನೆ ಕೈಗೊಳ್ಳಲಾಗಿದೆ. ಇದರ ಮೂಲಕ ಶಿಕ್ಷಣ ವ್ಯವಸ್ಥೆಯಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಲು ಸರ್ಕಾರ ಬದ್ಧವಾಗಿದೆ ಎಂದು ಉದಯ್ ಶೆಟ್ಟಿ ಮುನಿಯಾಲು ಹೇಳಿದರು.
ರಾಜ್ಯದ ಕಟ್ಟಕಡೆಯ ವ್ಯಕ್ತಿಯ ಕಲ್ಯಾಣದ ಬಗ್ಗೆ ಕಾಳಜಿ ಹೊಂದಿರುವ ಸರ್ಕಾರ ಜನಪರ ಬಜೆಟ್ ಮಂಡಿಸಿದೆ ಎಂದು ಅವರು ಅಭಿಪ್ರಾಯಪಟ್ಟರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top