ಉಡುಪಿ, ಜೂನ್ 1: ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಆಗಿರುವ 80 ಬಡಗಬೆಟ್ಟು ಗ್ರಾಮದ ನೇತಾಜಿನಗರ ನಿವಾಸಿ ಗಣೇಶ್ (32) ಎಂಬಾತನನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ. ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಅವರ ವರದಿಯ ಆಧಾರದ ಮೇಲೆ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಜೂನ್ 1ರಂದು ಗೂಂಡಾ ಕಾಯ್ದೆಯಡಿ ಬಂಧನ ಆದೇಶ ಹೊರಡಿಸಿದ್ದಾರೆ. ಆರೋಪಿ ಗಣೇಶ್ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ, ಹಲ್ಲೆ, ಅಕ್ರಮ ಕೂಟ, ಮಹಿಳೆಯರ ಮೇಲಿನ ದೌರ್ಜನ್ಯ, ಕಳ್ಳತನ ಸೇರಿದಂತೆ ಒಟ್ಟು 9 ಪ್ರಕರಣಗಳು ದಾಖಲಾಗಿವೆ. ಅವುಗಳಲ್ಲಿ 3 ಪ್ರಕರಣಗಳಲ್ಲಿ ಖುಲಾಸೆಯಾಗಿದ್ದು, 4 ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿವೆ. ಉಳಿದ 2 ಪ್ರಕರಣಗಳು ತನಿಖೆಯಲ್ಲಿವೆ. ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಆರೋಪಿಯನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಕಲಬುರ್ಗಿಯ ಕೇಂದ್ರ ಕಾರಾಗೃಹದಲ್ಲಿ ಇರಿಸಲು ಆದೇಶಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.