ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಎಂಡಿಎಂಎ ಸಾಗಾಟ: ಇಬ್ಬರ ಬಂಧನ

Picture of RB NEWS

RB NEWS

Bureau Report


ಉಡುಪಿ: ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಎಂಡಿಎಂಎ ಮಾದಕ ವಸ್ತುವನ್ನು ಕಾರಿನಲ್ಲಿ ಸಾಗಿಸುತ್ತಿದ್ದ ಆರೋಪದ ಮೇರೆಗೆ ಇಬ್ಬರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಉಡುಪಿ ಉದ್ಯಾವರದ ಪಳ್ಳಿಗುಡ್ಡೆಯ ಅಕ್ಬರ್ ಮಹಮ್ಮದ್ ಬಾಯಿರಿ (44) ಹಾಗೂ ಬೆಂಗಳೂರಿನ ಎಂ.ಎಸ್. ಪಾಳ್ಯದ ಸೈಯದ್ ಸುಹೇಲ್ (26) ಎಂದು ಗುರುತಿಸಲಾಗಿದೆ.
ಪೊಲೀಸರ ಮಾಹಿತಿಯಂತೆ, ಸೆಪ್ಟೆಂಬರ್ 17ರಂದು ಮಧ್ಯರಾತ್ರಿ ಸುಮಾರು 12.10ರ ವೇಳೆಗೆ ಪೆರಂಪಳ್ಳಿ ಸೇತುವೆ ಬಳಿ ಮಣಿಪಾಲ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದರು. ಈ ವೇಳೆ ಬೆಂಗಳೂರಿನಿಂದ ಬಂದಿದ್ದ ಬಿಳಿ ಬಣ್ಣದ ಮಾರುತಿ ಸ್ವಿಫ್ಟ್ ಕಾರನ್ನು ತಡೆದು ಪರಿಶೀಲನೆ ನಡೆಸಿದಾಗ, ಕಾರಿನಲ್ಲಿ ಸುಮಾರು 1 ಲಕ್ಷ ರೂ. ಮೌಲ್ಯದ 30 ಗ್ರಾಂ ಎಂಡಿಎಂಎ ಪತ್ತೆಯಾಗಿದೆ.
ಇದರೊಂದಿಗೆ ಸುಮಾರು 40 ಸಾವಿರ ರೂ. ಮೌಲ್ಯದ ನಾಲ್ಕು ಮೊಬೈಲ್ ಫೋನ್‌ಗಳು, 5 ಸಾವಿರ ರೂ. ಮೌಲ್ಯದ ಡಾಂಗಲ್, 9,500 ರೂ. ನಗದು ಹಾಗೂ ಕೃತ್ಯಕ್ಕೆ ಬಳಸಲಾಗಿದೆ ಎನ್ನಲಾದ ಸುಮಾರು 3 ಲಕ್ಷ ರೂ. ಮೌಲ್ಯದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಒಟ್ಟು ಸುಮಾರು 4.54 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳು ಎಂಡಿಎಂಎಯನ್ನು ವಿದ್ಯಾರ್ಥಿಗಳಿಗೆ ಮಾರಾಟ ಮಾಡುವ ಉದ್ದೇಶದಿಂದ ಸಾಗಿಸುತ್ತಿದ್ದರು ಎಂಬ ಆರೋಪದ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್‌ಐ ತಿಮ್ಮೇಶ್ ಬಿ.ಎನ್. ತನಿಖೆ ನಡೆಸುತ್ತಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಉಡುಪಿ ಉಪವಿಭಾಗದ ಡಿವೈಎಸ್‌ಪಿ ಬೆಳ್ಳಿಯಪ್ಪ ಅವರ ಮಾರ್ಗದರ್ಶನದಲ್ಲಿ, ಮಣಿಪಾಲ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top