ಕಾರ್ಕಳ, ಜು.22: ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ನಡೆದ ಬಲಪ್ರಯೋಗವನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಇತರ ವಿರೋಧ ಪಕ್ಷದ ನಾಯಕರ ಬಂಧನವನ್ನು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ತೀವ್ರವಾಗಿ ಖಂಡಿಸಿದ್ದಾರೆ. ಪತ್ರಿಕಾ ಪ್ರಕಟಣೆಯಲ್ಲಿ ಅವರು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಅಶ್ರುವಾಯು ಪ್ರಯೋಗ, ಜಲಫಿರಂಗಿ ದಾಳಿ ಹಾಗೂ ಲಾಠಿಚಾರ್ಜ್ ನಡೆಸಿರುವುದು ಖಂಡನೀಯ ಎಂದು ಹೇಳಿದ್ದಾರೆ. ವಿದ್ಯಾರ್ಥಿಗಳೇ ದೇಶದ ಭವಿಷ್ಯವಾಗಿದ್ದು, ಅವರ ಸಮಸ್ಯೆಗಳಿಗೆ ನ್ಯಾಯ ಒದಗಿಸುವುದು ಸರ್ಕಾರದ ಕರ್ತವ್ಯವಾಗಿದೆ. ಆದರೆ, ವಿದ್ಯಾರ್ಥಿಗಳ ಮೇಲೆ ಬಲಪ್ರಯೋಗ ನಡೆಸಿರುವುದು ಆಘಾತಕಾರಿ ಬೆಳವಣಿಗೆಯಾಗಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಿಂದ ಅನೇಕ ವಿದ್ಯಾರ್ಥಿಗಳು ಮಾನಸಿಕವಾಗಿ ತೊಂದರೆ ಅನುಭವಿಸಿದ್ದು, ಕೆಲವು ಆತ್ಮಹತ್ಯೆ ಪ್ರಕರಣಗಳೂ ವರದಿಯಾಗಿವೆ ಎಂದು ಅವರು ಉಲ್ಲೇಖಿಸಿದ್ದಾರೆ. ಇದೇ ವೇಳೆ, ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಅವರ ಬೇಡಿಕೆಗಳಿಗೂ ಕೇಂದ್ರ ಸರ್ಕಾರ ಸ್ಪಂದಿಸದಿರುವುದನ್ನು ಅವರು ಟೀಕಿಸಿದ್ದಾರೆ. ವಿದ್ಯಾರ್ಥಿಗಳ ಬೆಂಬಲಕ್ಕೆ ನಿಂತ ರಾಹುಲ್ ಗಾಂಧಿ ಸೇರಿದಂತೆ ವಿರೋಧ ಪಕ್ಷದ ನಾಯಕರ ಬಂಧನವು ಸರ್ವಾಧಿಕಾರಿ ಧೋರಣೆಯನ್ನು ತೋರಿಸುತ್ತದೆ ಎಂದು ಆರೋಪಿಸಿದ್ದಾರೆ. ವಿಪಕ್ಷ ನಾಯಕರು ದೇಶದ ಜನರ ಪರವಾಗಿ ಧ್ವನಿ ಎತ್ತುವುದು ಸಂವಿಧಾನಬದ್ಧ ಕರ್ತವ್ಯವಾಗಿದ್ದು, ಆ ಹುದ್ದೆಗೆ ಗೌರವ ನೀಡಬೇಕು. ರಾಹುಲ್ ಗಾಂಧಿಯವರ ಬಂಧನವು ಪ್ರಜಾಪ್ರಭುತ್ವ ಮೌಲ್ಯಗಳಿಗೆ ವಿರುದ್ಧವಾದ ನಡೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕೇಂದ್ರ ಸರ್ಕಾರ ತಕ್ಷಣ ರಾಹುಲ್ ಗಾಂಧಿಯವರ ಬಂಧನಕ್ಕೆ ಕ್ಷಮೆ ಯಾಚಿಸಿ, ವಿದ್ಯಾರ್ಥಿಗಳ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸಬೇಕು. ಅಲ್ಲದೆ, ವಿದ್ಯಾರ್ಥಿಗಳ ಮೇಲೆ ನಡೆದ ಬಲಪ್ರಯೋಗದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಶುಭದ ರಾವ್ ಒತ್ತಾಯಿಸಿದ್ದಾರೆ.