






ಹಸುಗಳ ಕೆಚ್ಚಲು ಕೊಯ್ದ ವಿಕೃತಿಯ ಬಂಧನ

ಬೆಂಗಳೂರು: ಚಾಮರಾಜಪೇಟೆ ಓಲ್ಡ್ ಪೆನ್ಷನ್ ಮೊಹಲ್ಲಾದ ವಿನಾಯಕನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ. ಸೈಯದ್ ನಸ್ರು (30) ಬಂಧಿತ ಆರೋಪಿ. ಬಿಹಾರದ ಚಂಪರಣ್ ಮೂಲದ ಆರೋಪಿ ಸೈಯದ್ ನಸ್ರು, ಕೃತ್ಯ ನಡೆದ ಸ್ಥಳದಿಂದ 50 ಮೀಟರ್ ಅಂತರದಲ್ಲಿರುವ ಪ್ಲ್ಯಾಸ್ಟಿಕ್, ಬಟ್ಟೆ ಹೊಲಿಯುವ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು ಎಂದು ತಿಳಿದುಬಂದಿದೆ.


ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿರುವುದಾಗಿ ಆರೋಪಿ ಸೈಯದ್ ನಸ್ರು ಪೊಲೀಸರ ಮುಂದೆ ಬಾಯಿ ಬಿಟ್ಟಿದ್ದಾನೆ. ಪೊಲೀಸರು ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಜನವರಿ 24ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಚಾಮರಾಜಪೇಟೆಯ ಓಲ್ಡ್ ಪೆನ್ನನ್ ಮೊಹಲ್ಲಾದ ವಿನಾಯಕನಗರ ನಿವಾಸಿ ಕರ್ಣ ಎಂಬುವರು ಕಳೆದ ಹಲವು ವರ್ಷಗಳಿಂದ ಇಲ್ಲಿ ಹಸು ಸಾಕುತ್ತಿದ್ದಾರೆ. ಶನಿವಾರ ತಡರಾತ್ರಿ ಯಾರೋ ಕಿಡಿಗೇಡಿಗಳು ಮೂರು ಹಸುಗಳ ಕೆಚ್ಚಲನ್ನು ಕತ್ತರಿಸಿ, ಕಾಲಿಗೆ ಮಚ್ಚಿನಿಂದ ಹಲ್ಲೆ ಮಾಡಿ ವಿಕೃತಿ ಮೆರೆದಿದ್ದರು.

































