[t4b-ticker]

ಬೀಟ್ ಪೊಲೀಸ್ ಕೊಲೆಗೆ ಯತ್ನ : ಆರೋಪಿಗಳ ಬಂಧನ

Picture of RB NEWS

RB NEWS

Bureau Report


ಮಂಗಳೂರು, ಮೇ 27 : ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಬೀಟ್ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಕೊಲೆಗೆ‌ ಯತ್ನಿಸಿದ ಇಬ್ಬರು ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಬೆಳ್ತಂಗಡಿಯ ಸಚಿನ್ ಕೆ.ಆರ್. (24) ಹಾಗೂ ಪುತ್ತೂರಿನ ಚಂದನ್ (24) ಎಂದು ಗುರುತಿಸಲಾಗಿದೆ.


ಮೇ 24ರಂದು ಬೆಳಗಿನ ಜಾವ ಸುಮಾರು 2.10ರ ವೇಳೆಗೆ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಕಲ್‌ನ ನಾರಾಯಣಗುರು ಸಮುದಾಯ ಭವನದ ರಸ್ತೆಯ ಬಳಿ ಈ ಘಟನೆ ನಡೆದಿತ್ತು. ಕೆಂಪು ಬಣ್ಣದ ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಸಂಚರಿಸುತ್ತಿದ್ದ ಇಬ್ಬರು ಯುವಕರನ್ನು ಬೀಟ್ ಪೊಲೀಸ್ ಸಿಬ್ಬಂದಿ ತಡೆದು ವಿಚಾರಣೆ ನಡೆಸುತ್ತಿದ್ದ ವೇಳೆ, ಹಿಂಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಏಕಾಏಕಿ ಸಿಮೆಂಟ್ ಶೀಟ್‌ನ ತುಂಡಿನಿಂದ ಪೊಲೀಸ್ ಸಿಬ್ಬಂದಿಯ ತಲೆಗೆ ಹಲ್ಲೆ ನಡೆಸಿದ್ದರಿಂದ ಗಾಯಗಳಾಗಿದ್ದವು.
ಈ ಸಂಬಂಧ ಉರ್ವಾ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 57/2026ರಡಿ ಬಿಎನ್‌ಎಸ್‌ನ ಸೆಕ್ಷನ್ 121(1), 109, 132 ಮತ್ತು 3(5)ರ ಅಡಿಯಲ್ಲಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿದ ಆರೋಪದಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೊಂಡ ಸಿಸಿಬಿ ಪೊಲೀಸರು, ಸಂಗ್ರಹಿಸಿದ ಪುರಾವೆಗಳು ಹಾಗೂ ದೊರೆತ ವಿಶ್ವಾಸಾರ್ಹ ಮಾಹಿತಿಯ ಆಧಾರದ ಮೇಲೆ ಮೇ 26ರಂದು ಕೇರಳದ ಕಾಞಂಗಾಡ್ ಪ್ರದೇಶದಲ್ಲಿ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಿದರು. ಬಳಿಕ ಅವರನ್ನು ಮುಂದಿನ ಕ್ರಮಕ್ಕಾಗಿ ಉರ್ವಾ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಯಿತು. ಕೃತ್ಯಕ್ಕೆ ಬಳಸಲಾದ ಬೈಕ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
ಪೊಲೀಸರ ಮಾಹಿತಿ ಪ್ರಕಾರ, ಆರೋಪಿಗಳು ಮಂಗಳೂರಿನ ಅಶೋಕನಗರದ ಫಲ್ಗುಣಿ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಸಚಿನ್ ಕೆ.ಆರ್. ಕುಂಟಿಕಾನ್‌ನ ಸಿಹಿತಿಂಡಿಗಳ ಕಾರ್ಖಾನೆಯಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದರೆ, ಚಂದನ್ ಕೂಳೂರಿನ ಖಾಸಗಿ ವಾಹನ ಶೋರೂಂನಲ್ಲಿ ಟೆಕ್ನಿಷಿಯನ್ ಆಗಿ ಕಾರ್ಯನಿರ್ವಹಿಸುತ್ತಿದ್ದನು.
ನಗರದಲ್ಲಿ ರಾತ್ರಿ ವೇಳೆ ಸಂಚರಿಸುತ್ತಿದ್ದ ಆರೋಪಿಗಳನ್ನು ಬೀಟ್ ಸಿಬ್ಬಂದಿ ತಡೆದು ಪ್ರಶ್ನಿಸಿದಾಗ ಉಂಟಾದ ಆಕ್ರೋಶದಿಂದ ಅವರು ಸಿಮೆಂಟ್ ಶೀಟ್‌ನ ತುಂಡಿನಿಂದ ಹಲ್ಲೆ ನಡೆಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top