ಚುನಾವಣೆಯಲ್ಲಿ ಅಕ್ರಮ: ಹೆಬ್ರಿ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿ ರದ್ದು
RB NEWS
Bureau Report
ಚುನಾವಣೆಯಲ್ಲಿ ಅಕ್ರಮ: ಹೆಬ್ರಿ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿ ರದ್ದು ಕೆಎಟಿ ಮಹತ್ವದ ಆದೇಶ; ಹೊಸದಾಗಿ ಚುನಾವಣೆ ನಡೆಸಲು ಸೂಚನೆ ಕುಂದಾಪುರ: ಹೆಬ್ರಿ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಅಕ್ರಮಗಳು ನಡೆದಿರುವುದು ಸಾಬೀತಾದ ಹಿನ್ನೆಲೆಯಲ್ಲಿ, ಪ್ರಸ್ತುತ ಆಡಳಿತ ಮಂಡಳಿಯನ್ನು ರದ್ದುಗೊಳಿಸಿ ಕರ್ನಾಟಕ ಆಡಳಿತ ನ್ಯಾಯಮಂಡಳಿ (ಕೆಎಟಿ) ಮಹತ್ವದ ಆದೇಶ ಹೊರಡಿಸಿದೆ. ಸಂಘಕ್ಕೆ 2023ರ ಜುಲೈ 9ರಂದು ಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ದೂರಿನ ವಿಚಾರಣೆ ನಡೆಸಿದ ಕುಂದಾಪುರ ಸಹಕಾರಿ ಸಂಘಗಳ ನಿಬಂಧಕರ ತೀರ್ಪನ್ನು ಕರ್ನಾಟಕ ಆಡಳಿತ ನ್ಯಾಯಮಂಡಳಿ ಎತ್ತಿಹಿಡಿದಿದೆ. ಪ್ರಸ್ತುತ ಅಸ್ತಿತ್ವದಲ್ಲಿರುವ ಆಡಳಿತ ಮಂಡಳಿಯನ್ನು ತಕ್ಷಣದಿಂದಲೇ ರದ್ದುಪಡಿಸಿ, ಹೊಸದಾಗಿ ಚುನಾವಣೆ ನಡೆಸುವಂತೆ ಕೆಎಟಿ ತನ್ನ ಆದೇಶದಲ್ಲಿ ಸ್ಪಷ್ಟವಾಗಿ ಸೂಚಿಸಿದೆ. ಹೊಸ ಆಡಳಿತ ಮಂಡಳಿ ಅಸ್ತಿತ್ವಕ್ಕೆ ಬರುವವರೆಗೆ ಸಂಘದ ನಿರ್ವಹಣೆಗಾಗಿ ಆಡಳಿತಾಧಿಕಾರಿಯನ್ನು ನೇಮಿಸುವಂತೆಯೂ ಆದೇಶಿಸಲಾಗಿದೆ. ಚುನಾವಣೆಯಲ್ಲಿ ನಡೆದಿರುವ ಅಕ್ರಮಗಳ ಕುರಿತು ಕುಂದಾಪುರ ಸಹಕಾರಿ ಸಂಘಗಳ ನಿಬಂಧಕರು ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೆಎಟಿ, ಹಿಂದಿನ ತೀರ್ಪನ್ನು ಎತ್ತಿಹಿಡಿದಿದೆ. ಇದರೊಂದಿಗೆ ಪ್ರಸ್ತುತ ಆಡಳಿತ ಮಂಡಳಿಗೆ ಸಂಘದ ಆಡಳಿತಾತ್ಮಕ ಹಾಗೂ ಹಣಕಾಸು ವ್ಯವಹಾರಗಳನ್ನು ನಡೆಸಲು ಯಾವುದೇ ಅಧಿಕಾರವಿಲ್ಲ ಎಂದು ನ್ಯಾಯಮಂಡಳಿ ಸ್ಪಷ್ಟಪಡಿಸಿದೆ. ನ್ಯಾಯಮಂಡಳಿಯ ಸ್ಪಷ್ಟ ಆದೇಶದ ಬಳಿಕವೂ ಕಾನೂನು ಹಾಗೂ ನ್ಯಾಯಮಂಡಳಿಯ ತೀರ್ಪನ್ನು ಉಲ್ಲಂಘಿಸಿ ಆಡಳಿತ ಮಂಡಳಿಯ ಸಭೆ ಮತ್ತು ವಾರ್ಷಿಕ ಮಹಾಸಭೆಯನ್ನು ಅಕ್ರಮವಾಗಿ ನಡೆಸಲಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ. ಈ ಕುರಿತು ಹೆಬ್ರಿ ಸಹಕಾರಿ ಹಾಲು ಉತ್ಪಾದಕರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ನೀರೆ ಕೃಷ್ಣ ಶೆಟ್ಟಿ ಅವರು ಪತ್ರಿಕಾ ಹೇಳಿಕೆ ನೀಡಿ, ನ್ಯಾಯಮಂಡಳಿಯ ಆದೇಶವನ್ನು ಸಂಪೂರ್ಣವಾಗಿ ಪಾಲಿಸಬೇಕು ಹಾಗೂ ಸಂಘದ ಆಡಳಿತವನ್ನು ಕಾನೂನುಬದ್ಧವಾಗಿ ಮುಂದುವರಿಸಬೇಕು ಎಂದು ಒತ್ತಾಯಿಸಿದ್ದಾರೆ. ಕೆಎಟಿ ಆದೇಶದ ಹಿನ್ನೆಲೆಯಲ್ಲಿ ಹೆಬ್ರಿ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತದಲ್ಲಿ ಮುಂದಿನ ದಿನಗಳಲ್ಲಿ ಯಾವ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದು ಕುತೂಹಲ ಮೂಡಿಸಿದೆ.