ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ

Picture of RB NEWS

RB NEWS

Bureau Report

ಬೆಂಗಳೂರು:  ಕೆಆರ್ ನಗರದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿ ನಂತರ ಆಕೆಯನ್ನು ಅಪಹರಿಸಿದ್ದ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂಬುದು ಸಾಬೀತಾಗಿದ್ದು, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ. ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಹಾಗೂ 10 ಲಕ್ಷ ರೂ. ದಂಡ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ ನ್ಯಾಯಧೀಶ ಸಂತೋಷ್ ಗಜಾನನ ಭಟ್ ತೀರ್ಪು ನೀಡಿದ್ದಾರೆ.

ಐಪಿಸಿ ಸೆಕ್ಷನ್ 376(2)(k) ಹಾಗೂ 376 (2)(n) ಅಡಿ ತೀರ್ಪು ಪ್ರಕಟಿಸಲಾಗಿದ್ದು, ಜೀವನ ಪರ್ಯಂತ ಜೈಲು ಶಿಕ್ಷೆಯನ್ನು ಪ್ರಜ್ವಲ್ ಅನುಭವಿಸಬೇಕಿದೆ. ಅತ್ಯಾಚಾರದ 2 ಸೆಕ್ಷನ್​​​ಗಳ ಅಡಿ ಒಟ್ಟು 10 ಲಕ್ಷ ರೂ. ದಂಡ ವಿಧಿಸಲಾಗಿದೆ. ಇದರಲ್ಲಿ 7 ಲಕ್ಷ ರೂ. ಸಂತ್ರಸ್ತೆಗೆ ನೀಡಬೇಕು ಎಂದು ಜಡ್ಜ್ ತೀರ್ಪಿನಲ್ಲಿ ತಿಳಿಸಿದ್ದಾರೆ.


ಕೇವಲ 4 ತಿಂಗಳ ದಾಖಲೆ ಸಮಯದಲ್ಲೇ ಜಡ್ಜ್ ಸಂತೋಷ್ ಗಜಾನನ ಭಟ್ ತೀರ್ಪು ಪ್ರಕಟಿಸಿದ್ದಾರೆ. ಇದರೊಂದಿಗೆ, ಮೂರು ಅತ್ಯಾಚಾರ ಪ್ರಕರಣ, 1 ಲೈಂಗಿಕ ದೌರ್ಜನ್ಯ ಹೀಗೆ ಒಟ್ಟು 4 ಪ್ರಕರಣಗಳ ಪೈಕಿ ಒಂದರಲ್ಲಿ ತೀರ್ಪು ಹೊರಬಿದ್ದಂತಾಗಿದೆ

ಪ್ರಜ್ವಲ್ ದೋಷಿ ಎಂದು ಶುಕ್ರವಾರ ತೀರ್ಪು ನೀಡಿದ್ದ ಕೋರ್ಟ್, ಶಿಕ್ಷೆ ಪ್ರಮಾಣದ ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಿತ್ತು. ಇಂದು ಬೆಳಗ್ಗೆ ನಡೆದ ವಾದ-ಪ್ರತಿವಾದ ಆಲಿಸಿದ ಜಡ್ಜ್ ಸಂತೋಷ್ ಗಜಾನನ ಭಟ್ ಅಂತಿಮವಾಗಿ ಇದೀಗ ಶಿಕ್ಷೆಯ ಪ್ರಮಾಣ ಪ್ರಕಟಿಸಿದ್ದಾರೆ.

ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ 2024ರ ಲೋಕಸಭೆ ಚುನಾವಣೆ ಸಂದರ್ಭ ಸರಣಿ ಅತ್ಯಾಚಾರ ಆರೋಪ ಕೇಳಿಬಂದಿತ್ತು. ಅವರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಆಗಿದ್ದವು. ಮೈಸೂರಿನ ಕೆಆರ್ ನಗರದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪವೂ ಒಂದಾಗಿದೆ. ಅತ್ಯಾಚಾರ ಪ್ರಕರಣ ಬೆಳಕಿಗೆ ಬರಬಾರದು ಎಂದು ಮಹಿಳೆಯನ್ನು ಅಪಹರಿಸಿ ಹುಣಸೂರು ಬಳಿಯ ತೋಟದ ಮನೆಯಲ್ಲಿ ಕೂಡಿಹಾಕಲಾಗಿತ್ತು ಎಂಬ ಆರೋಪದ ಅಡಿ ದೂರು ದಾಖಲಾಗಿತ್ತು.

ಈ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್​ಡಿ ರೇವಣ್ಣ ಮತ್ತು ಭವಾನಿ ರೇವಣ್ಣ ಸೇರಿದಂತೆ ಒಟ್ಟು 9 ಆರೋಪಿಗಳಿದ್ದಾರೆ. ಹೆಚ್​ಡಿ ರೇವಣ್ಣ ಹಾಗೂ ಭವಾನಿ ರೇವಣ್ಣ ಜಾಮೀನಿನ ಮೇಲೆ ಹೊರಗಿದ್ದಾರೆ. ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ಒಂದು ವರ್ಷದಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಪ್ರಕರಣ ಸಂಬಂಧ 2024ರ ಮೇ 31ರಂದು ಪ್ರಜ್ವಲ್ ರೇವಣ್ಣರನ್ನು ಪೊಲೀಸರು ಬಂಧಿಸಿದ್ದರು. ಇದೀಗ ಅವರು ದೋಷಿ ಎಂದು ಸಾಬೀತಾಗಿದ್ದು, ಶಿಕ್ಷೆಯಾಗಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top