ಬೆಂಗಳೂರು: ಲೈಂಗಿಕ ದೌರ್ಜನ್ಯ ವೆಸಗಿದ ದೂರಿನನ್ವಯ ಬಿಜೆಪಿ ಮುಖಂಡ ಹಾಗೂ ವಕೀಲ ಜಿ.ದೇವರಾಜೇಗೌಡನನ್ನು ಹಿರಿಯೂರು ಗ್ರಾಮಾಂತರ ಪೋಲಿಸರು ಬಂಧಿಸಿದ್ದಾರೆ.
ಶುಕ್ರವಾರ ರಾತ್ರಿ ಈ ಹಿನ್ನೆಲೆಯಲ್ಲಿ ಹಿರಿಯೂರು ಗ್ರಾಮಾಂತರ ಪೊಲೀಸರು ನೇತೃತ್ವದಲ್ಲಿ ಹಿರಿಯೂರು ತಾಲೂಕಿನ ಕೆಆರ್ ಹಳ್ಳಿ ಗೇಟ್ ಬಳಿ ಇನೋವಾ ಕಾರಿನಲ್ಲಿ ಬರುತ್ತಿದ್ದಾಗ ದೇವರಾಜೇಗೌಡ ನನ್ನು ಪೊಲೀಸರು ಬಂಧಿಸಿದ್ದಾರೆ.
ದೇವರಾಜೇಗೌಡ ನಿವೇಶನವನ್ನು ಮಾರಿಸಿಕೊಡುವ ನೆಪದಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಎಪ್ರಿಲ್ 1 ರಂದು ಹೊಳೆನರಸೀಪುರ ನಗರ ಠಾಣೆಯಲ್ಲಿ ಸಂತ್ರಸ್ತ ಮಹಿಳೆ ದೂರು ನೀಡಿದ್ದರು. ಅದರನ್ವಯ ಪ್ರಕರಣ ದಾಖಲಾಗಿತ್ತು.
ಹೆದರಿಸಿ, ಬೆದರಿಸಿ ನನ್ನ ಮೇಲೆ ದೌರ್ಜನ್ಯ ನಡೆಸಲಾಗಿದೆ. ವಿಡಿಯೊ ಕಾಲ್ ಮಾಡಿ ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿ ದೇವರಾಜೇಗೌಡ, ಹಾಸನದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಮೇ 8 ರಂದು ಜಾಮೀನು ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯವು ವಿಚಾರಣೆಯನ್ನು ಮೇ 15ಕ್ಕೆ ಮುಂದೂಡಿತ್ತು.
ಈ ಎಲ್ಲಾ ಬೆಳವಣಿಗೆಯ ನಡುವೆ ದೇವರಾಜೇಗೌಡ, ಮಹಿಳೆ ಹಾಗೂ ಆಕೆಯ ಪತಿ ವಿರುದ್ಧ ಹನಿ ಟ್ಯಾಪ್ ಆರೋಪದಲ್ಲಿ ಬೆಂಗಳೂರಿನ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧಿಸಿದಂತೆ ಪೊಲೀಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.






































