ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ವಂಚಕ ಸಿಸಿಬಿ ಬಲೆಗೆ
RB NEWS
Bureau Report
ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ವಂಚಕ ಸಿಸಿಬಿ ಬಲೆಗೆ
ಮಂಗಳೂರು: ರಾಷ್ಟ್ರೀಯ ಅಪರಾಧ ತನಿಖಾ ದಳ (ಎನ್ಸಿಐಬಿ) ನಿರ್ದೇಶಕ ಹಾಗೂ ಅಧಿಕಾರಿಯೆಂದು ಸುಳ್ಳು ಪರಿಚಯ ಮಾಡಿಕೊಂಡು ಸುಲಿಗೆ ಮತ್ತು ವಂಚನೆ ನಡೆಸುತ್ತಿದ್ದ ಪ್ರಕರಣದಲ್ಲಿ ಬಂಧಿತರಾಗಿ, ಬಳಿಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತನನ್ನು ಕೇರಳ ಮೂಲದ ಹಾಗೂ ಪ್ರಸ್ತುತ ಉತ್ತರ ಪ್ರದೇಶದ ಲಕ್ನೋದಲ್ಲಿ ವಾಸವಾಗಿದ್ದ ಶ್ಯಾಮ್ ಪೀಟರ್ ಅಲಿಯಾಸ್ ಡ್ಯಾನಿ ತಾರಕನ್ ಅಲಿಯಾಸ್ ಆಂಟನಿ (64) ಎಂದು ಗುರುತಿಸಲಾಗಿದೆ.
ಆರೋಪಿ ಶ್ಯಾಮ್ ಪೀಟರ್ ತನ್ನದೇ ಗ್ಯಾಂಗ್ ರಚಿಸಿಕೊಂಡು, ರಾಷ್ಟ್ರೀಯ ತನಿಖಾ ಸಂಸ್ಥೆಗಳ ಅಧಿಕಾರಿಗಳಂತೆ ನಟಿಸುತ್ತಿದ್ದ. ಹಣಕಾಸು ವಿವಾದಗಳು, ಬ್ಯಾಂಕ್ ವಂಚನೆ ಹಾಗೂ ತೆರಿಗೆ ಪ್ರಕರಣಗಳಲ್ಲಿ ಸಿಲುಕಿದ್ದ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು, ತಾನು ತನಿಖಾ ಸಂಸ್ಥೆಯ ಅಧಿಕಾರಿಯೆಂದು ನಂಬಿಸಿ ಹಣ ಪಡೆದು ವಂಚನೆ ಮತ್ತು ಸುಲಿಗೆ ನಡೆಸುತ್ತಿದ್ದನೆಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಮಂಗಳೂರು ಕದ್ರಿ ಪೊಲೀಸರು 2019ರ ಆಗಸ್ಟ್ 16ರಂದು ಪಂಪ್ವೆಲ್ನಲ್ಲಿರುವ ಲಾಡ್ಜ್ ಮೇಲೆ ದಾಳಿ ನಡೆಸಿ, ಶ್ಯಾಮ್ ಪೀಟರ್ ಸೇರಿದಂತೆ ಆತನ ಗ್ಯಾಂಗ್ನ ಎಂಟು ಮಂದಿಯನ್ನು ಬಂಧಿಸಿದ್ದರು. ನಂತರ ಆರೋಪಿ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡಿದ್ದರೂ, ವಿಚಾರಣೆಗೆ ಹಾಜರಾಗದೆ ಕಳೆದ ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದನು.
ತನಿಖೆಯಲ್ಲಿ ಆರೋಪಿಯು ತನ್ನ ನಿಜವಾದ ಗುರುತನ್ನು ಮರೆಮಾಚಲು ವಿವಿಧ ಸ್ಥಳಗಳಲ್ಲಿ ಹಲವು ಹೆಸರುಗಳನ್ನು ಬಳಸಿಕೊಂಡು ವಾಸಿಸುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ. ಆಂಟನಿ, ರಾಹುಲ್ ಪೀಟರ್, ಸ್ಯಾಮ್ ಪೀಟರ್, ರಾಜೇಶ್ ರಾಬಿನ್ಸನ್, ರೀತು ರಿಚರ್ಡ್, ರಾಯ್ ಜೇಕಬ್, ರಾಬಿನ್ ರಿಚರ್ಡ್ಸನ್, ರಾಬಿನ್ ಸನ್, ಆಂಟೋನಿ ಪ್ರಾನ್ಸಿಸ್, ಶಾರೂನ್ ಪ್ರಾನ್ಸಿಸ್ ಹಾಗೂ ಡ್ಯಾನಿ ತಾರಕನ್ ಸೇರಿದಂತೆ ಒಟ್ಟು 11 ಹೆಸರುಗಳನ್ನು ಬಳಸಿಕೊಂಡಿರುವುದು ತನಿಖೆಯಲ್ಲಿ ಪತ್ತೆಯಾಗಿದೆ.
ಪೊಲೀಸರ ಮಾಹಿತಿಯ ಪ್ರಕಾರ, ‘ರಾಹುಲ್ ಪೀಟರ್’ ಎಂಬ ಹೆಸರಿನಲ್ಲಿ ಆರೋಪಿಯ ವಿರುದ್ಧ 2001ರಿಂದಲೇ ಇಂಟರ್ಪೋಲ್ ರೆಡ್ ಕಾರ್ನರ್ ನೋಟಿಸ್ ಜಾರಿಯಲ್ಲಿದೆ. ಮಂಗಳೂರು ಪೂರ್ವ, ಉಳ್ಳಾಲ, ಕೊಣಾಜೆ, ಉಡುಪಿ ನಗರ, ಕುಶಾಲನಗರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಠಾಣೆಗಳಲ್ಲದೆ, ಬಿಹಾರ, ತಮಿಳುನಾಡು, ಮಹಾರಾಷ್ಟ್ರ, ಉತ್ತರ ಪ್ರದೇಶ, ಛತ್ತೀಸ್ಗಢ, ಜಾರ್ಖಂಡ್ ಹಾಗೂ ಮಧ್ಯಪ್ರದೇಶ ರಾಜ್ಯಗಳಲ್ಲೂ ವಂಚನೆ ಮತ್ತು ಮೋಸದ ಸುಮಾರು 17 ಪ್ರಕರಣಗಳು ದಾಖಲಾಗಿರುವುದಾಗಿ ತಿಳಿದುಬಂದಿದೆ.
ಉಳ್ಳಾಲ ಪೊಲೀಸ್ ಠಾಣೆಯ ಪ್ರಕರಣದಲ್ಲಿ ಆರೋಪಿಯ ವಿರುದ್ಧ 17 ಬಾರಿ ವಾರಂಟ್ ಜಾರಿಯಾಗಿದ್ದು, ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಪ್ರಕರಣದಲ್ಲಿ 14 ಬಾರಿ ವಾರಂಟ್ ಹೊರಡಿಸಿದ ಬಳಿಕ ಪ್ರೊಕ್ಲಮೇಷನ್ ಕೂಡಾ ಜಾರಿಗೊಂಡಿತ್ತು.
ಬಂಧಿತ ಆರೋಪಿಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದ್ದು, ಆರೋಪಿಯ ಪತ್ತೆ ಹಾಗೂ ಬಂಧನ ಕಾರ್ಯಾಚರಣೆಯಲ್ಲಿ ಮಂಗಳೂರು ನಗರ ಸಿಸಿಬಿ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.